ಉಡುಪಿಯಲ್ಲಿ ಬಹುತೇಕ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ತರಗತಿಗೆ ಗೈರು
ಹೈಕೋರ್ಟ್ ತೀರ್ಪಿನಂತೆ ಹಿಜಾಬ್ ನಿಷೇಧ

ಉಡುಪಿ : ಹಿಜಾಬ್ ಕುರಿತು ಹೈಕೋರ್ಟ್ ತೀರ್ಪಿನ ಬಳಿಕ ಇಂದು ಉಡುಪಿ ಜಿಲ್ಲೆಯಾದ್ಯಂತ ಶಾಲಾ ಕಾಲೇಜುಗಳು ಆರಂಭಗೊಂಡಿದ್ದು, ವಿದ್ಯಾರ್ಥಿನಿಯರು ಕಾಲೇಜು ಆವರಣದೊಳಗೆ ಬುರ್ಕಾ, ಹಿಜಾಬ್‌ನೊಂದಿಗೆ ಆಗಮಿಸಿ, ತರಗತಿಯೊಳಗೆ ಹಿಜಾಬ್ ತೆಗೆದಿರಿಸಿ ತೆರಳಿದರು.
ಹಿಜಾಬ್ ಹಾಕದೆ ತರಗತಿ ಹೋಗಲು ಒಪ್ಪದ ಹೈಕೋರ್ಟ್ ಅರ್ಜಿದಾರರಾದ ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆರು ವಿದ್ಯಾರ್ಥಿನಿಯರು ಹಾಗೂ ಉಡುಪಿ ಎಂಜಿಎಂ, ಅಜ್ಜರಕಾಡು ಜಿ.ಶಂಕರ್ ಸರಕಾರಿ ಪದವಿ ಕಾಲೇಜು, ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜು ಸೇರಿದಂತೆ ಹಲವು ವಿದ್ಯಾರ್ಥಿನಿಯರು ಗೈರು ಹಾಜರಾಗಿದ್ದಾರೆ.
ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಆಗಮಿಸಿದ ಕೆಲವು ವಿದ್ಯಾರ್ಥಿನಿಯರಿಗೆ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಪ್ರವೇಶ ನಿರಾಕರಿಸಲಾಯಿತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರು ಗೇಟಿನ ಹೊರಗಡೆ ನಿಂತು ತರಗತಿ ಪ್ರವೇಶಕ್ಕೆ ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು.
ಕುಂದಾಪುರ ಸರಕಾರಿ ಜ್ಯೂನಿಯರ್ ಕಾಲೇಜಿನಲ್ಲಿಯೂ ಬಹುತೇಕ ಮಂದಿ ಹಿಜಾಬ್ ಧಾರಿ ವಿದ್ಯಾರ್ಥಿನಿಯರು ತರಗತಿಗೆ ಗೈರು ಹಾಜರಾಗಿದ್ದಾರೆಂದು ತಿಳಿದುಬಂದಿದೆ. ಕಾಲೇಜು ಆವರಣದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿದೆ.