ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ವಿಚಾರ ಶೀಘ್ರದಲ್ಲೇ ಸಮಿತಿ: ಸಚಿವ ಎಂಟಿಬಿ ನಾಗರಾಜ್

ಬೆಂಗಳೂರು, ಮಾ.21: ರಾಜ್ಯದ 48 ನಗರ ಹಾಗೂ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ಮೂರು ತಿಂಗಳು ಕಳೆದಿದ್ದು, ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಕಲ್ಪಿಸುವ ಸಂಬಂಧ ಶೀಘ್ರದಲ್ಲೇ ಸಮಿತಿ ಮಾಡಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ಹೇಳಿದರು.
ಮಂಗಳವಾರ ವಿಧಾನಪರಿಷತ್ತಿನ ಕಲಾಪದಲ್ಲಿ ಕಾಂಗ್ರೆಸ್‍ನ ಪ್ರಕಾಶ್ ರಾಥೋಡ್ ಪ್ರಶ್ನೆಗೆ ಉತ್ತರಿಸಿದ ಅವರು, 2010ರಲ್ಲಿ ಸುಪ್ರೀಂಕೋರ್ಟ್ ತೀರ್ಪಿನನ್ವಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿ ಕಲ್ಪಿಸುವುದು ತಡವಾಗಿದೆ ಎಂದು ತಿಳಿಸಿದರು.
ಎಸ್ಸಿ-ಎಸ್ಟಿ, ಸಾಮಾನ್ಯ ವರ್ಗದವರನ್ನು ಗಮನದಲ್ಲಿಟ್ಟುಕೊಂಡು ಮೀಸಲಾತಿ ಪ್ರಕಟಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಹೀಗಾಗಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ಕಲ್ಪಿಸಬೇಕು ಎನ್ನುವ ಉದ್ದೇಶದಿಂದ ಸರಕಾರ ಚಿಂತನೆ ನಡೆಸುತ್ತಿದೆ. ರಾಜ್ಯ ಸರಕಾರಕ್ಕೂ ಶೀಘ್ರ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಮೀಸಲಾತಿ ಕಲ್ಪಿಸಬೇಕು ಎನ್ನುವ ಉದ್ದೇಶವಿದೆ ಎಂದರು.
ನ್ಯಾಯಾಲಯದ ತೀರ್ಪು ಅಡ್ಡ ಬಂದಿದ್ದರಿಂದ ತೊಂದರೆಯಾಗಿದೆ. ಚುನಾವಣಾ ಪ್ರಕ್ರಿಯೆ ಪ್ರಾರಂಭವಾದಾಗಿನಿಂದ ಹಿಂದುಳಿದ ವರ್ಗದವರಿಗೆ ಮೀಸಲಾತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಈಗ ಆ ಸಮುದಾಯಕ್ಕೆ ಅನ್ಯಾಯವಾಗಬಾರದು ಎನ್ನುವ ಉದ್ದೇಶದಿಂದ ಮೀಸಲಾತಿ ಕಲ್ಪಿಸಲು ಸಮಿತಿ ರಚಿಸಲು ಮುಂದಾಗಿದೆ ಎಂದು ಹೇಳಿದರು.







