ಆದಿತ್ಯನಾಥ್ ಪ್ರಮಾಣ ವಚನ: ಮುಖೇಶ್ ಅಂಬಾನಿ ಸೇರಿದಂತೆ 60 ಕ್ಕೂ ಅಧಿಕ ಉದ್ಯಮಿಗಳಿಗೆ ಆಹ್ವಾನ
ದಿ ಕಾಶ್ಮೀರ್ ಫೈಲ್ಸ್ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ನಟ ಅನುಪಮ್ ಖೇರ್ ಕೂಡಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ

ಲಕ್ನೋ: ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಆದಿತ್ಯನಾಥ್ ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸುವುದನ್ನು ವೀಕ್ಷಿಸಲು ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಮತ್ತು ಇತರ 60 ಉದ್ಯಮಿಗಳಿಗೆ ಆಹ್ವಾನಿಸಲಾಗಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಆದಿತ್ಯನಾಥ್ ಶುಕ್ರವಾರ ಸಂಜೆ 4 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಸಮ್ಮುಖದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಹಲವಾರು ಬಿಜೆಪಿ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು, ಸೇರಿದಂತೆ ಇತರ ಉನ್ನತ ಅತಿಥಿಗಳು ಕೂಡಾ ಈ ಸಮಾರಂಭದಲ್ಲಿ ಉಪಸ್ಥಿತರಿರುತ್ತಾರೆ.
ರಾಜ್ಯದಲ್ಲಿ ಉದ್ಯೋಗವನ್ನು ಸೃಷ್ಟಿಸುವ ಮತ್ತು ರಾಜ್ಯದ ಆರ್ಥಿಕತೆಯನ್ನು ಉತ್ತೇಜಿಸುವ ಸಲುವಾಗಿ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಪ್ರಮುಖ ಕೈಗಾರಿಕೋದ್ಯಮಿಗಳನ್ನು ಆಹ್ವಾನಿಸಲಾಗಿದೆ ಎಂದು ಯುಪಿ ಮಾಜಿ ಬಿಜೆಪಿ ಮುಖ್ಯಸ್ಥ ಲಕ್ಷ್ಮೀಕಾಂತ್ ಬಾಜ್‌ಪೇಯ್ ಅವರು ಎಎನ್‌ಐ ಸುದ್ದಿ ಸಂಸ್ಥೆಗೆ ಹೇಳಿದ್ದಾರೆ.
ಉದ್ಯಮಿಗಳು ಮಾತ್ರವಲ್ಲದೆ ಪ್ರಮುಖ ದೇವಾಲಯದ ಅರ್ಚಕರನ್ನೂ ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ. ವಿವಾದಾತ್ಮಕ ದಿ ಕಾಶ್ಮೀರ್ ಫೈಲ್ಸ್‌ನ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಮತ್ತು ಚಲನಚಿತ್ರ ನಟ ಅನುಪಮ್ ಖೇರ್ ಅವರನ್ನೂ ಕೂಡಾ ಆಹ್ವಾನಿಸಲಾಗಿದೆ.
ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಸೇರಿದಂತೆ ವಿರೋಧ ಪಕ್ಷದ ಹಿರಿಯ ನಾಯಕರಿಗೂ ಆಹ್ವಾನ ನೀಡಲಾಗಿದೆ. ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ, ಸಮಾಜವಾದಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ ಸಂಸ್ಥಾಪಕ ಮುಲಾಯಂ ಯಾದವ್ ಅವರನ್ನು ಸಹ ಕರೆಯಲಾಗಿದೆ.
ಲಕ್ನೋದ ಏಕಾನಾ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ. ಸುಮಾರು 50,000 ಮಂದಿ ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಸ್ಥಳದಲ್ಲಿ ಕಾರ್ಯಕ್ರಮದ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ. ಇಡೀ ಕ್ರೀಡಾಂಗಣವನ್ನು ದೀಪಗಳಿಂದ ಅಲಂಕರಿಸಲಾಗಿದೆ ಎಂದು ವರದಿಗಳು ಹೇಳಿವೆ.







