ಅಸೈಗೋಳಿಯಲ್ಲಿ ಅಂಬೇಡ್ಕರ್ ಫ್ಲೆಕ್ಸ್ ಗೆ ಹಾನಿ ಪ್ರಕರಣ: ಕಠಿಣ ಕ್ರಮಕ್ಕೆ ದಲಿತ ಮುಖಂಡರು ಆಗ್ರಹ

ಕೊಣಾಜೆ, ಮಾ.26: ಅಸೈಗೋಳಿಯಲ್ಲಿ ಹಾಕಿದ್ದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯ ಫ್ಲೆಕ್ಸ್ ಗೆ ಹಾನಿ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಇದರ ಹಿಂದಿರುವ ಕಾಣದ ಕೈಗಳನ್ನು ಪತ್ತೆಹಚ್ಚಿ ಬಂಧಿಸುವಂತೆ ಆಗ್ರಹಿಸಿ ಬಂಟ್ವಾಳ ತಾಲೂಕು ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ನೇತೃತ್ವದಲ್ಲಿ ಕೊಣಾಜೆ ಠಾಣೆಗೆ ಮನವಿ ಸಲ್ಲಿಸಲಾಯಿತು.
ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿದ್ದರೂ ಈ ಸಂಚಿನ ಹಿಂದೆ ಇರುವವರನ್ನೂ ಪತ್ತೆ ಹಚ್ಚಬೇಕು. ಇಂತಹ ಕೃತ್ಯಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು. ಆರೋಪಿಗಳ ವಿರುದ್ಧ ದಲಿತ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಮನವಿ ಸಲ್ಲಿಸಿದ ನಿಯೋಗದಲ್ಲಿ ಕೊಣಾಜೆ ಗ್ರಾಪಂ ಅಧ್ಯಕ್ಷೆ ಚಂಚಲಾಕ್ಷಿ, ಮಂಗಳೂರು ತಾಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು, ಬಂಟ್ವಾಳ ತಾಲೂಕು ಭಾರತರತ್ನ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಸಮಾಜ ಸೇವಾ ಸಂಘದ ಅಧ್ಯಕ್ಷ ಸತೀಶ್ ಕೆ. ಅರಳ, ಗೌರವ ಸಲಹೆಗಾರ ಪದ್ಮನಾಭ ನರಿಂಗಾನ, ಕಾರ್ಯಾಧ್ಯಕ್ಷ ರಾಜಾ ಚೆಂಡ್ತಿಮಾರ್, ಉಪಾಧ್ಯಕ್ಷ ಕೃಷ್ಣಪ್ಪ ಪೂದ್ದೋಟ್ಟು, ಜೊತೆ ಕಾರ್ಯದರ್ಶಿ ಸಂತೋಷ್ ಭಂಡಾರಿಬೆಟ್ಟು, ಸಂಘಟನಾ ಕಾರ್ಯದರ್ಶಿ ಉಮೇಶ್ ಕೃಷ್ಣಾಪುರ, ದ.ಕ. ಜಿಲ್ಲಾ ದಲಿತ್ ಸೇವಾ ಸಮಿತಿಯ ಅಧ್ಯಕ್ಷ ಸ್ಥಾಪಕಾಧ್ಯಕ್ಷ ಬಿ.ಕೆ.ಸೇಸಪ್ಪ ಬೆದ್ರಕಾಡ್, ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ) ದ.ಕ. ಜಿಲ್ಲಾ ಸಂಘಟನಾ ಸಂಚಾಲಕ ದಿನೇಶ್ ಮೂಳೂರು, ದಲಿತ ಮುಖಂಡರಾದ ಪ್ರವೀಣ್, ಯಾದವ್ ಮುಂತಾದವರು ಉಪಸ್ಥಿತರಿದ್ದರು.