ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಡಾ.ಎಂ.ಬಿ.ಪಾಟೀಲ್ ನಾಳೆ ಪದಗ್ರಹಣ

ಬೆಂಗಳೂರು, ಮಾ. 27: ಕೆಪಿಸಿಸಿ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಡಾ.ಎಂ.ಬಿ.ಪಾಟೀಲ್ ಮಾ.28ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ನಗರದ ಅರಮನೆ ಮೈದಾನದ ಗಾಯತ್ರಿ ವಿಹಾರ್ ನಲ್ಲಿ ಏರ್ಪಡಿಸಿರುವ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಪದಗ್ರಹಣ ಕಾರ್ಯಕ್ರಮದ ಉದ್ಘಾಟನೆಯನ್ನು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೆರವೇರಿಸಲಿದ್ದು, ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಭಾಗವಹಿಸಲಿದ್ದಾರೆ.
ಇದಲ್ಲದೆ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್, ಧೃವನಾರಾಯಣ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯ ಕೆ.ಎಚ್.ಮುನಿಯಪ್ಪ, ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ಮಾಜಿ ಸಚಿವರಾದ ಎಚ್.ಕೆ.ಪಾಟೀಲ್, ದಿನೇಶ್ ಗುಂಡೂರಾವ್, ಆರ್.ವಿ.ದೇಶಪಾಂಡೆ, ಕೆ.ಆರ್.ರಮೇಶ್ ಕುಮಾರ್, ಶಾಸಕರು, ಮಾಜಿ ಶಾಸಕರು, ಸಂಸದರು, ಮಾಜಿ ಸಂಸದರು, ಹಿರಿಯ ಮುಖಂಡರು, ಜಿಲ್ಲಾ ಹಾಗೂ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಎಲ್ಲ ಘಟಕದ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಈ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.







