ಉಡುಪಿ ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲ ರೀತಿಯ ಸಿದ್ಧತೆ : ಡಿಸಿ ಕೂರ್ಮಾರಾವ್

ಉಡುಪಿ : ಜಿಲ್ಲೆಯಲ್ಲಿ ಎಸೆಸೆಲ್ಸಿ ಪರೀಕ್ಷೆ ಸುಗಮವಾಗಿ ನಡೆಯಲು ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದ್ದು, ಸರಕಾರದ ಸುತ್ತೋಲೆಯಂತೆ ಕ್ರಮಕೈಗೊಂಡಿದ್ದು, ಯಾವುದೇ ಗೊಂದಲ ಇಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.
ಎಸೆಸೆಲ್ಸಿ ಪರೀಕ್ಷೆಗೆ ಸಂಬಂಧಿಸಿ ಸರಕಾರಿ ಶಾಲೆಗಳ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿಕೊಂಡು ಬರಬೇಕು. ಖಾಸಗಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಅಲ್ಲಿನ ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರವನ್ನು ಹಾಕಿಕೊಂಡು ಬರಬೇಕು ಎಂದು ತಿಳಿಸಿದ್ದು, ಈ ಬಗ್ಗೆ ಶಿಕ್ಷಣ ಇಲಾಖೆಯವರು ಜಿಲ್ಲೆಯಲ್ಲಿ ಯಾವುದೇ ಗೊಂದಲ ಆಗದಂತೆ ಸರಿಯಾಗಿ ನಿರ್ವಹಿಸಲಿದ್ದಾರೆ. ನಮ್ಮಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಕೂರ್ಮಾರಾವ್ ಮಾಹಿತಿ ನೀಡಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ 14022 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಸೋಮವಾರ ನಡೆಯಲಿರುವ ಕನ್ನಡ ಪರೀಕ್ಷೆಗೆ ಹಾಜರಾದರು. ಎಲ್ಲಿಯೂ ಗೊಂದಲಕ್ಕೆ ಅವಕಾಶ ಇರಲಿಲ್ಲ. ಪರೀಕ್ಷಾ ಕೇಂದ್ರಕ್ಕೆ ಪೋಷಕರಿಗೆ ಅನುಮತಿ ಇಲ್ಲ. ಬುರ್ಕಾ ಮತ್ತು ಹಿಜಾಬ್ ತೆಗೆದು ಪರೀಕ್ಷಾ ಕೊಠಡಿಗೆ ತೆರೆಯಲು ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು.
ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಉಡುಪಿಯ ಬೋರ್ಡ್ ಹೈಸ್ಕೂಲ್ಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.
ಉಡುಪಿಯ ಪರೀಕ್ಷಾ ಕೇಂದ್ರಕ್ಕೆ ವಿಶೇಷ ಭದ್ರತೆಯಲ್ಲಿ ಅಧಿಕಾರಿಗಳು ಪ್ರಶ್ನೆಪತ್ರಿಕೆ ತಂದರು. ಶಾಲಾ ಮುಖ್ಯೋಪಾಧ್ಯಾಯರಿಗೆ ಪ್ರಶ್ನೆಪತ್ರಿಕೆ ಹಸ್ತಾಂತರಿಸಲಾಯಿತು.
ಜಿಲ್ಲೆಯಲ್ಲಿ ಒಟ್ಟು 56 ಪರೀಕ್ಷಾ ಕೇಂದ್ರಗಳಿದ್ದು, ಇವರಲ್ಲಿ 1200 ಕ್ಕೂ ಅಧಿಕ ಮುಸ್ಲಿಂ ವಿದ್ಯಾರ್ಥಿನಿಯರಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಹಿಜಾಬ್ಗೆ ಅವಕಾಶವಿಲ್ಲ. ಗೊಂದಲಕ್ಕೆ ಅವಕಾಶವಿಲ್ಲದಂತೆ ಪರೀಕ್ಷೆ ನಡೆಸಲು ಶಿಕ್ಷಣ ಇಲಾಖೆ ತಯಾರಿ ಮಾಡಿಕೊಂಡಿತ್ತು.