ಉಪ ಲೋಕಾಯುಕ್ತರಾಗಿ ಪ್ರಮಾಣ ವಚನ ಸ್ವೀಕರಿಸಿದ ನ್ಯಾ.ಕೆ.ಎನ್.ಫಣೀಂದ್ರ

ಬೆಂಗಳೂರು, ಮಾ.29: ರಾಜ್ಯದ ನೂತನ ಉಪ ಲೋಕಾಯುಕ್ತರಾಗಿ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ.
ಮಂಗಳವಾರ ರಾಜ ಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರಿಗೆ ಪ್ರಮಾಣ ವಚನವನ್ನು ಬೋಧಿಸಿದರು.
2020ರ ಡಿಸೆಂಬರ್ 16ರಂದು ನಿವೃತ್ತ ನ್ಯಾಯಮೂರ್ತಿ ಎನ್.ಆನಂದ್ ಉಪ ಲೋಕಾಯುಕ್ತ ಹುದ್ದೆಯಿಂದ ನಿವೃತ್ತರಾದಾಗಿನಿಂದಲೂ ಈ ಹುದ್ದೆ ಖಾಲಿ ಇತ್ತು. ಮಾರ್ಚ್ 22ರಂದು ನ್ಯಾಯಮೂರ್ತಿ ಫಣೀಂದ್ರ ಅವರ ಹೆಸರನ್ನು ಉಪ ಲೋಕಾಯುಕ್ತ ಹುದ್ದೆಗೆ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದರು.
ಮಾ.29ರಂದು ನ್ಯಾ. ಫಣೀಂದ್ರ ಅವರು ತಮ್ಮ ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪ ಸಭಾಪತಿ ಆನಂದ್ ಮಾಮನಿ, ಗೃಹ ಸಚಿವ ಆರಗ ಜ್ಞಾನೆಂದ್ರ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್, ಶಾಸಕ ಸುರೇಶ್ ಕುಮಾರ್, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್, ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಮತ್ತು ಇತರರು ಉಪಸ್ಥಿತರಿದ್ದರು.







