ಮುಝಪ್ಫರ್ ನಗರ್: ಬಿಕೆಯು ಕಾರ್ಯಕರ್ತರ ಬಂಧನದ ವಿರುದ್ಧ ರಾಕೇಶ್ ಟಿಕಾಯತ್ ಧರಣಿ

ಮುಝಪ್ಫರ್ನಗರ್, ಮಾ. 29: ರೈತ ಸಂಘಟನೆಯ ಕೆಲವು ಕಾರ್ಯಕರ್ತರನ್ನು ಬಂಧಿಸಿರುವುದರ ವಿರುದ್ಧ ಬಿಕೆಯು ನಾಯಕ ರಾಕೇಶ್ ಟಿಕಾಯತ್ ತಮ್ಮ ಬೆಂಬಲಿಗರೊಂದಿಗೆ ಮಂಗಳವಾರ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ. ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಸೋಮವಾರ ರಾತ್ರಿ ನಡೆದ ಘರ್ಷಣೆಯ ಹಿನ್ನೆಲೆಯಲ್ಲಿ ಭಾರತೀಯ ಕಿಸಾನ್ ಒಕ್ಕೂಟ (ಬಿಕೆಯು)ದ ಹೋರಾಟಗಾರರನ್ನು ಸೋಮವಾರ ರಾತ್ರಿ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಲ್ಲಿನ ಕೊಟ್ವಾಲಿ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ ಟಿಕಾಯತ್ ಕಾರ್ಯಕರ್ತರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದರು. ಅಲ್ಲದೆ, ಅವರನ್ನು ಪ್ರಕರಣದಲ್ಲಿ ತಪ್ಪಾಗಿ ಸಿಲುಕಿಸಲಾಗಿದೆ ಎಂದು ಆರೋಪಿಸಿದರು. ಈ ಹಿಂದೆ ನಡೆದ ಘರ್ಷಣೆಯಲ್ಲಿ ಗಾಯಗೊಂಡವರಿಗೆ ಕೂಡಲೇ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಬಿಕೆಯು ಕಾರ್ಯಕರ್ತರು ಆಗ್ರಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ಗುಂಪಿಗೆ ಸೇರಿದ ಜನರು ಆಸ್ಪತ್ರೆಗೆ ಆಗಮಿಸಿದ್ದರು. ಒಂದು ಗುಂಪಿನ ವೈದ್ಯಕೀಯ ಪರೀಕ್ಷೆ ನಡೆಸಲಾಗಿತ್ತು. ಇನ್ನೊಂದು ಗುಂಪಿನ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಬಿಕೆಯು ಕಾರ್ಯಕರ್ತರು ಆಗ್ರಹಿಸಿದರು. ಇದು ಘರ್ಷಣೆಗೆ ಕಾರಣವಾಯಿತು ಎಂದು ಆಸ್ಪತ್ರೆಯ ವೈದ್ಯಕೀಯ ಅಧಿಕಾರಿ ಡಾ. ಬಾಬುರಾಮ್ ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ 10 ಮಂದಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.





