ಮಂಗಳೂರು ವಿವಿ ವಿದ್ಯಾರ್ಥಿ ಸಂಘ ಉದ್ಘಾಟನೆ; ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಆಹ್ವಾನ ವಿರೋಧಿಸಿ ಸಿಎಫ್‌ಐ ಪ್ರತಿಭಟನೆ
ಹಲವು ವಿದ್ಯಾರ್ಥಿಗಳು ಪೊಲೀಸ್ ವಶಕ್ಕೆ

ಮಂಗಳೂರು : ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮ ಇಂದು ಕೊಣಾಜೆಯ ಮಂಗಳಗಂಗೋತ್ರಿ ಕ್ಯಾಂಪಸ್‌ನಲ್ಲಿ ನಡೆಯಲಿದ್ದು, ಕಾರ್ಯಕ್ರಮದ ಉದ್ಘಾಟನೆಗೆ ಆರೆಸೆಸ್ಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಆಹ್ವಾನ ನೀಡಿರುವುದಕ್ಕೆ ಕ್ಯಾಂಪಸ್ ಫ್ರಂಟ್ ಮಂಗಳೂರು ವಿವಿ ಘಟಕ ತೀವ್ರವಾಗಿ ವಿರೋಧ ವ್ಯಕ್ತಪಡಿಸಿದ್ದು, ವಿಶ್ವವಿದ್ಯಾನಿಲಯಕ್ಕೆ ಮುತ್ತಿಗೆ ಹಾಕಿದೆ.
ಪ್ರತಿಭಟನೆ ನಡೆಸಿ, ವಿಶ್ವವಿದ್ಯಾಲಯಕ್ಕೆ ಮುತ್ತಿಗೆ ಹಾಕಿದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿ ನಾಯಕ ಸೇರಿದಂತೆ ಹಲವು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ವಿಶ್ವವಿದ್ಯಾನಿಲಯದ ಅಧಿಕೃತ ಕಾರ್ಯಕ್ರಮಕ್ಕೆ ಇಂತಹ ದ್ವೇಷ ಭಾಷಣಗಾರರನ್ನು ಆಹ್ವಾನಿಸುವ ಮೂಲಕ ಶೈಕ್ಷಣಿಕ ವಾತಾವರಣ ಹದಗೆಡುವುದರಲ್ಲಿ ಸಂಶಯವಿಲ್ಲ, ಈಗಾಗಲೇ ಕಲ್ಲಡ್ಕ ಪ್ರಭಾಕರ್ ಭಟ್ ಜಿಲ್ಲಾದ್ಯಂತ ಕೋಮುದ್ವೇಷದ ಭಾಷಣಗಳನ್ನು ಮಾಡುತ್ತಾ ಸಮಾಜದ ಶಾಂತಿ ಸುವ್ಯವಸ್ಥೆಗೆ ಧಕ್ಕೆ ತಂದಿರುತ್ತಾರೆ. ವಿವಿಧ ಠಾಣೆಗಳಲ್ಲಿ ಅವರ ವಿರುದ್ಧ ದೂರು ಕೂಡ ದಾಖಲಾಗಿರುತ್ತದೆ. ಇಂತಹ ವ್ಯಕ್ತಿಗಳನ್ನು ವಿಶ್ವವಿದ್ಯಾನಿಯದ ಅಧಿಕೃತ ಕಾರ್ಯಕ್ರಮಕ್ಕೆ ಆಹ್ವಾನಿಸಿ ಭಾಷಣ ನೀಡುವುದು ದುರದೃಷ್ಟಕರ. ಆದ್ದರಿಂದ ವಿಶ್ವವಿದ್ಯಾನಿಲಯದ ವಿದ್ಯಾರ್ಥಿ ಪರಿಷತ್ ಉದ್ಘಾಟನಾ ಕಾರ್ಯಕ್ರಮಕ್ಕೆ ಅವರನ್ನು ಕೈಬಿಟ್ಟು ವಿಶ್ವವಿದ್ಯಾನಿಲಯದ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕು ಎಂದು ಮಂಗಳೂರು ವಿವಿ ಕುಲಪತಿ ಬಿ.ಎಸ್ ಯಡಪಡಿತ್ತಾಯ ಅವರಿಗೆ ಕ್ಯಾಂಪಸ್ ಫ್ರಂಟ್ ನಿಯೋಗ ಸೋಮವಾರ ಮನವಿ ಸಲ್ಲಿಸಿತ್ತು.
ವಿವಿ ಕ್ಯಾಂಪಸ್ ನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಲಾಗಿದೆ.