ಜನರ ಆರೋಗ್ಯ, ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ: ಅಬಕಾರಿ ಸಚಿವ ಕೆ.ಗೋಪಾಲಯ್ಯ

ಬೆಂಗಳೂರು: ಮಹಾಲಕ್ಷ್ಮಿ ಲೇ ಔಟ್ ವಿಧಾನಸಭಾ ಕ್ಷೇತ್ರದ ಜನರ ಆರೋಗ್ಯ ಮತ್ತು ಮಕ್ಕಳ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಲಾಗಿದೆ ಎಂದು ಕ್ಷೇತ್ರದ ಶಾಸಕರು ಆದ ಅಬಕಾರಿ ಸಚಿವ ಕೆ.ಗೋಪಾಲಯ್ಯ ಹೇಳಿದರು.
ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವೃಷಭಾವತಿ ಮತ್ತು ಕಮಲಾ ನಗರದ ನಿವಾಸಿಗಳಿಗಾಗಿ ಮಾ.27 ರಂದು ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ ಇರುವ ನೂತನ ಸರ್ಕಾರಿ ಸೂಪರ್ ಸ್ಪೆಷಾಲಿಟಿ ಹೆರಿಗೆ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಶಿಬಿರದಲ್ಲಿ ನೇತ್ರ ತಪಾಸಣೆ ಮಾಡಿಕೊಂಡಿದ್ದವರ ಪೈಕಿ ಅಗತ್ಯ ಇರುವ 450 ಜನರಿಗೆ ಇಂದು ಉಚಿತವಾಗಿ ಕನ್ನಡಕಗಳನ್ನು ವಿತರಿಸುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕ್ಷೇತ್ರದ ಜನರ ಉತ್ತಮ ಆರೋಗ್ಯಕ್ಕಾಗಿ ಪ್ರತಿ ತಿಂಗಳು ಎರಡು ಬಾರಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಿ ಔಷಧಿಗಳನ್ನು ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆ ಅಗತ್ಯ ಇರುವವರಿಗೆ ಇತರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಅನುಕೂಲ ಮಾಡಿಕೊಡಲಾಗುತ್ತಿದೆ. ಇದೀಗ ಶಂಕರ್ ನಾಗ್ ಬಸ್ ನಿಲ್ದಾಣದ ಬಳಿ ನೂತನವಾಗಿ ನಿರ್ಮಾಣಗೊಂಡಿರುವ ಸರ್ಕಾರಿ ಸೂಪರ್ ಸ್ಪೆಷಾಲಿಟಿ ಹೆರಿಗೆ ಆಸ್ಪತ್ರೆ ಶೀಘ್ರವೇ ಲೋಕಾರ್ಪಣೆಗೊಳ್ಳಲಿದೆ. ಈ ಆಸ್ಪತ್ರೆಯನ್ನು ಜನರಿಗೆ ಪರಿಚಯಿಸುವ ದೃಷ್ಟಿಯಿಂದ ಇಲ್ಲಿ ಆರೋಗ್ಯ ಶಿಬಿರ ಮತ್ತು ಕನ್ನಡಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಇನ್ನು ಕ್ಷೇತ್ರ ವ್ಯಾಪ್ತಿಯ ಮಧ್ಯಮ ಮತ್ತು ಬಡ ಕುಟುಂಬದ ಪೋಷಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಕ್ಷೇತ್ರದ ಮೂರು ಕಡೆ ದೆಹಲಿ ಮಾದರಿಯ ಸರ್ಕಾರಿ ಪಬ್ಲಿಕ್ ಶಾಲೆ ನಿರ್ಮಾಣ ಮಾಡಲಾಗಿದೆ. ಬರುವ ಶೈಕ್ಷಣಿಕ ವರ್ಷದಿಂದ ಈ ಶಾಲೆಗಳಲ್ಲಿ 6 ಸಾವಿರಕ್ಕೂ ಅಧಿಕ ಮಕ್ಕಳಿಗೆ ಪ್ರವೇಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಮಹಾಲಕ್ಷ್ಮಿ ಎಜುಕೇಷನಲ್ ಟ್ರಸ್ಟ್ ಅಧ್ಯಕ್ಷ ಜಯರಾಮಯ್ಯ,ಮುಖಂಡತರಾದ ನಿಸರ್ಗ ಜಗದೀಶ್, ಶ್ರೀನಿವಾಸ್, ಜಯಸಿಂಹ ಹಾಗೂ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.







