ತೆಂಕನಿಡಿಯೂರು: ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಉದ್ಘಾಟನೆ

ಉಡುಪಿ, ಎ.೫: ವಿದ್ಯಾರ್ಥಿಗಳಲ್ಲಿ ನಾಯಕತ್ವ ಶಕ್ತಿ ಬೆಳೆಸುವಲ್ಲಿ ವಿದ್ಯಾರ್ಥಿ ಸಂಘಗಳ ಪಾತ್ರ ಮಹತ್ವವಾದುದು. ರಾಜಕೀಯ ಪ್ರಜ್ಞೆಯೊಂದಿಗೆ ಸಾಂವಿಧಾನಿಕ ಮೌಲ್ಯಗಳನ್ನು ರೂಢಿಸುವಲ್ಲಿ ವಿದ್ಯಾರ್ಥಿ ಸಂಘಗಳು ಶ್ರಮಿಸಬೇಕು ಎಂದು ಶಾಸಕ ಕೆ.ರಘುಪತಿ ಭಟ್ ಹೇಳಿದ್ದಾರೆ.
ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿ ವೇದಿಕೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ.ಗಣನಾಥ ಎಕ್ಕಾರು ವಹಿಸಿದ್ದರು. ವಿದ್ವಾಂಸ ಪ್ರೊ.ಗಣಪತಿ ಭಟ್ ಕುಳಮರ್ವ ವಿಶೇಷ ಉಪನ್ಯಾಸ ನೀಡಿದರು. ಕಾಲೇಜು ಅಭಿವೃದ್ಧಿ ಸಮಿತಿಯ ಖಜಾಂಚಿ ದಯಾನಂದ ಶೆಟ್ಟಿ ಕೊಜಕುಳಿ, ಗ್ರಾಪಂ ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು.
ಕಾಲೇಜಿನ ಐಕ್ಯೂಎಸಿ ಸಂಯೋಜಕ ಡಾ. ಸುರೇಶ್ ರೈ ಕೆ. ಉಪಸ್ಥಿತರಿದ್ದರು. ವಿದ್ಯಾರ್ಥಿ ವೇದಿಕೆಯ ಸ್ನಾತಕೋತ್ತರ ವಿಭಾಗದ ಸಂಚಾಲಕ ಡಾ.ದುಗ್ಗಪ್ಪ ಕಜೆಕಾರ್ ಸ್ವಾಗತಿಸಿದರು. ಪದವಿ ವಿಭಾಗದ ಸಂಚಾಲಕ ಪ್ರೊ.ರಾಧಾಕೃಷ್ಣ ಪ್ರತಿಜ್ಞಾ ವಿಧಿ ಬೋಧಿಸಿದರು. ಇಂಗ್ಲಿಷ್ ವಿಭಾಗದ ಮುಖ್ಯಸ್ಥೆ ಪ್ರೊ.ಶರ್ಮಿಳಾ ಹಾರಾಡಿ ಕಾರ್ಯಕ್ರಮ ನಿರೂಪಿಸಿದರು.