ಎಸ್ಸಿ- ಎಸ್ಟಿ ಸಮುದಾಯಗಳಿಗೆ 75 ಯೂನಿಟ್ ವಿದ್ಯುತ್ ಉಚಿತ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು, ಎ.5: ಗ್ರಾಮೀಣ ಪ್ರದೇಶದಲ್ಲಿ ಕುಟೀರ ಯೋಜನೆಯಡಿ ಎಸ್ಸಿ, ಎಸ್ಟಿ ಸಮುದಾಯದವರಿಗೆ 75 ಯೂನಿಟ್‍ವರೆಗೆ ಉಚಿತ ವಿದ್ಯುತ್ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.
ಮಂಗಳವಾರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್‍ರಾಂ ಅವರ 115ನೆ ಜನ್ಮದಿನಾಚರಣೆ ಹಾಗೂ ಡಾ.ಬಾಬು ಜಗಜೀವನರಾಂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಎಸ್ಸಿ, ಎಸ್ಟಿ ಸಮುದಾಯಕ್ಕೆ ಉಚಿತ ವಿದ್ಯುತ್ ಸಂಪರ್ಕ ನೀಡಲು ತೀರ್ಮಾನಿಸಲಾಗಿದೆ. ಅದರಂತೆ ಮುಂದಿನ ವಾರದೊಳಗಾಗಿ ಸರಕಾರಿ ಆದೇಶವನ್ನು ಹೊರಡಿಸಲಾಗುವುದು ಎಂದು ಅವರು ತಿಳಿಸಿದರು.
ಅದೇ ರೀತಿ, ಎಸ್ಸಿ, ಎಸ್ಟಿ ವರ್ಗದವರಿಗಾಗಿ ಭೂ ಒಡೆತನ ಯೋಜನೆಯಡಿ ನೀಡಲಾಗುತ್ತಿದ್ದ 15 ಲಕ್ಷ ರೂ. ಸಹಾಯಧನವನ್ನು 20 ಲಕ್ಷ ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ. ಜತೆಗೆ, ಮನೆ ನಿರ್ಮಾಣಕ್ಕಾಗಿ ನೀಡಲಾಗುತ್ತಿದ್ದ 1.75 ಲಕ್ಷ ರೂ.ಗಳ ಸಹಾಯಧನವನ್ನು 2 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗುವುದು ಎಂದರು.
ಸ್ವಯಂ ಉದ್ಯೋಗ ಮಾಡುವ ಎಸ್ಸಿ, ಎಸ್ಟಿ ಸಮುದಾಯಕ್ಕೆ ಪ್ರತಿ ತಾಲೂಕಿನಲ್ಲಿ ಬಾಬು ಜಗಜೀವರಾಂ ಸ್ವಯಂ ಉದ್ಯೋಗ ಯೋಜನೆಯನ್ನು ತರಲು ತೀರ್ಮಾನಿಸಲಾಗಿದೆ. ಈ ಯೋಜನೆಯ ರೂಪುರೇಷೆಯನ್ನು ಸಿದ್ಧಪಡಿಸಿ ಕೂಡಲೇ ಒಂದು ತಿಂಗಳ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ನುಡಿದರು.
ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಲ್ಲಿ ವಿಶೇಷ ತರಬೇತಿ ನೀಡುವ ವಿನೂತನ ಯೋಜನೆಯನ್ನು ಈ ವರ್ಷ ಪ್ರಾರಂಭ ಮಾಡಲಾಗುವುದು. ಮುಖ್ಯಮಂತ್ರಿ ಮಾರ್ಗದರ್ಶಿನಿ ವೇದಿಕೆಯ ಮೂಲಕ 8 ರಿಂದ 12 ವರೆಗಿನ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡುವ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗುವುದು ಎಂದು ತಿಳಿಸಿದರು.
ಸ್ಟಾರ್ಟ್‍ಅಪ್ ಯೋಜನೆಯಡಿ 50 ಲಕ್ಷ ರೂ.ಗಳ ಸಹಾಯಧನ ನೀಡುವ ಯೋಜನೆಯನ್ನು ಆಯವ್ಯಯದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದ ಅವರು, ಶಿಕ್ಷಣ, ಉದ್ಯೋಗ, ಸಾಮಾಜಿಕ ಗೌರವ, ಅವಕಾಶಗಳು ದೊರೆತಾಗ ಮಾತ್ರ ಸಮುದಾಯ ಮುಖ್ಯವಾಹಿನಿಗೆ ಬಂದಾಗ ಮಾತ್ರ ಭಾರತ ಸಮಗ್ರ ಅಭಿವೃದ್ಧಿ ಪೂರ್ಣವಾಗುತ್ತದೆ ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಸಿ.ಸಿ ಪಾಟೀಲ, ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ ಪ್ರಮುಖರು ಪಾಲ್ಗೊಂಡಿದ್ದರು.
ಸಿಎಂ ಮುಂದೆಯೇ ಪ್ರತಿಭಟನೆ
ರಾಜ್ಯ ಸರಕಾರ ಪರಿಶಿಷ್ಟರ ಒಳ ಮೀಸಲಾತಿ ಜಾರಿ ಮಾಡಬೇಕು. ಅಷ್ಟೇ ಅಲ್ಲದೆ, ಈ ಕಾರ್ಯಕ್ರಮದ ಬಗ್ಗೆ ಪತ್ರಿಕೆಗಳಲ್ಲಿ ಚಿಕ್ಕ ಜಾಹೀರಾತುಗಳನ್ನು ನೀಡಿ ಡಾ.ಬಾಬು ಜಗಜೀವನರಾಂ ಅವರಿಗೆ ಅವಮಾನ ಮಾಡಲಾಗಿದೆ ಎಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಕೆಲವರು ಘೋಷಣೆ ಕೂಗಿ ಪ್ರತಿಭಟಿಸಿದ ಪ್ರಸಂಗ ಜರುಗಿತು.
ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲರನ್ನೂ ಸಮಾಧಾನಗೊಳಿಸಿ ಈ ಬಗ್ಗೆ ಸಭೆ ಕರೆಯುತ್ತೇನೆ. ಎಲ್ಲವನ್ನೂ ಚರ್ಚಿಸೋಣ ಕ್ರಾಂತಿಕಾರಿ ತೀರ್ಮಾನಗಳನ್ನು ಮಾಡೋಣವೆಂಬ ವಿಶ್ವಾಸ ವ್ಯಕ್ತಪಡಿಸಿದರು.







