ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ: ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ಘೋಷಣೆ

ಶಿವಮೊಗ್ಗ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಗಂಭೀರ ಆರೋಪ ಎದುರಿಸುತ್ತಿರುವ ಗ್ರಾಮೀಣಾಬಿವೃದ್ಧಿ ಸಚಿವ ಈಶ್ವರಪ್ಪ ರಾಜೀನಾಮೆ ಘೋಷಿಸಿದ್ದಾರೆ.
ಬುಧವಾರ ಇಲ್ಲಿನ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಈಶ್ವರಪ್ಪ, ನಾಳೆ ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದರು.
ರಾಜೀನಾಮೆ ನೀಡುವ ಬಗ್ಗೆ 2-3 ದಿನಗಳ ಹಿಂದೆಯೇ ನಿರ್ಧಾರ ಮಾಡಿದ್ದೆ, ಪಕ್ಷಕ್ಕೆ ಮುಜುಗರವಾಗಬಾರದೆಂಬ ಕಾರಣಕ್ಕಾಗಿ ರಾಜೀನಾಮೆ ನೀಡುವುದಾಗಿ ಹೇಳಿದರು.
ಏ.15ರಂದು ಸಂಜೆ ಬೆಂಗಳೂರಿಗೆ ತೆರಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದು, ಜನಪರ ಕಾರ್ಯಗಳನ್ನು ಮಾಡಲು ಅವಕಾಶ ನೀಡಿದ ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸುತ್ತೇನೆ ಎಂದು ಹೇಳಿದರು.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಪಕ್ಷದ ಹಿರಿಯರೊಂದಿಗೆ ಚರ್ಚೆ ಮಾಡಿದ ಬಳಿಕವೇ ಈ ತೀರ್ಮಾನಕ್ಕೆ ಬಂದಿದ್ದೇನೆ. ಪಕ್ಷದ ಹಿರಿಯರು ತಮ್ಮದೇನೂ ತಪ್ಪಿಲ್ಲ, ರಾಜೀನಾಮೆಯ ಅಗತ್ಯವಿಲ್ಲ ಎಂದು ಹೇಳಿದ್ದರಿಂದಾಗಿಯೇ ಸುಮ್ಮನಿದ್ದೆ ಎಂದರು.
ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು, ಮಂಗಳವಾರ (ಏ.12) ಉಡುಪಿ ನಗರದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿಯ ಶಾಂಭವಿ ಹೋಟೆಲ್ ನ ರೂಂ ನಲ್ಲಿ ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದರು.







