ವಿಜಯನಗರ | ಬಿಜೆಪಿ ಗೆಲುವಿಗೆ ಒಗ್ಗಟ್ಟಿನಿಂದ ಕೆಲಸ ಮಾಡಿ: ಜೆ.ಪಿ.ನಡ್ಡಾ ಸಲಹೆ

ವಿಜಯನಗರ, ಎ. 17: ‘ನಮ್ಮ ಅಭಿವೃದ್ಧಿ ಕಾರ್ಯಗಳು ಮತ್ತು ಸಾಧನೆಗಳನ್ನು ಆಧರಿಸಿ ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಅಧಿಕಾರಕ್ಕೆ ತರುವ ಮೂಲಕ ದಕ್ಷಿಣ ಭಾರತದಲ್ಲಿ ಬದಲಾವಣೆಗೆ ಕರ್ನಾಟಕ ರಾಜ್ಯ ನಾಂದಿಯಾಗಬೇಕು. ಆ ನಿಟ್ಟಿನಲ್ಲಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಶ್ರಮಿಸಬೇಕು' ಎಂದು ರಾಷ್ಟ್ರೀಯಾಧ್ಯಕ್ಷ ಜೆ.ಪಿ.ನಡ್ಡಾ ಇಂದಿಲ್ಲಿ ಕರೆ ನೀಡಿದ್ದಾರೆ.
ರವಿವಾರ ಇಲ್ಲಿನ ಹೊಸಪೇಟೆಯಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕಾರಿಣಿಯಲ್ಲಿ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ‘ಕೇಂದ್ರ ಹಾಗೂ ರಾಜ್ಯ ಸರಕಾರದ ಹಲವು ಕ್ಷೇತ್ರಗಳಲ್ಲಿ ಸಾಧನೆ ಮಾಡಿದೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲ್ಲು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು' ಎಂದು ಅವರು ಸಲಹೆ ನೀಡಿದರು.
‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರದ ಕಾರ್ಯವೈಖರಿ ತೃಪ್ತಿ ತಂದಿದೆ. ಮುಂದಿನ ದಿನಗಳಲ್ಲಿ ನಿಗದಿತ ಗುರಿಯನ್ನು ಮುಟ್ಟಬೇಕು. ರಾಷ್ಟ್ರ ಮೊದಲು, ಪಕ್ಷ ನಂತರ, ವೈಯಕ್ತಿಕ ವಿಚಾರಗಳು ಅಂತಿಮ ಎನ್ನುವುದರಲ್ಲಿ ಬಿಜೆಪಿ ಬಲವಾದ ವಿಶ್ವಾಸ ಹೊಂದಿದೆ. ಆ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಿದರೆ ದೇಶ ಮುಂದುವರೆಯಲು ಸಾಧ್ಯ' ಎಂದು ಅವರು ನುಡಿದರು.
ಎಲ್ಲ ರಾಜಕೀಯ ಪಕ್ಷಗಳು ಕುಟುಂಬ ರಾಜಕಾರಣ ಮಾಡುತ್ತಿವೆ. ಬೇರೆ ಪಕ್ಷಗಳು ಯಾವುದೇ ಸಿದ್ಧಾಂತ ಉಳಿಸಿಕೊಂಡಿಲ್ಲ. ಆದರೆ, ಬಿಜೆಪಿ ಅವುಗಳಿಗೆ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿದ್ದು, ಎಲ್ಲರ ವಿಶ್ವಾಸ ಗಳಿಸಿದೆ. ಬಿಜೆಪಿಯಲ್ಲಿ ನಾಯಕರು, ಕಾರ್ಯಕರ್ತರ ದೊಡ್ಡ ಪಡೆಯೇ ಇದೆ. ಆ ಶಕ್ತಿಯೊಂದಿಗೆ ಮತ್ತೆ ರಾಜ್ಯದಲ್ಲಿ ಮತ್ತೊಮ್ಮ್ಲೆ ಅಧಿಕಾರಕ್ಕೆ ಬರಬೇಕು ಎಂದು ಜೆ.ಪಿ.ನಡ್ಡಾ ಕರೆ ನೀಡಿದರು.
ಈ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಚಿವರಾದ ಶಶಿಕಲಾ ಜೊಲ್ಲೆ, ಆನಂದ್ ಸಿಂಗ್, ಮಾಜಿ ಸಿಎಂಗಳಾದ ಯಡಿಯೂರಪ್ಪ, ಜಗದೀಶ ಶೆಟ್ಟರ್, ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸೇರಿದಂತೆ ಇನ್ನಿತರರು ಹಾಜರಿದ್ದರು.







