ಅಕ್ರಮ ಹಣ ವರ್ಗಾವಣೆ ಪ್ರಕರಣ ರದ್ದು ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು, ಎ.18: ಅಕ್ರಮ ಹಣ ವರ್ಗಾವಣೆ ಕಾಯ್ದೆ ಅಡಿ ಜಾರಿ ನಿರ್ದೇಶನಾಲಯ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ.
ಈ ಸಂಬಂಧ ಮಂಡ್ಯ ನಿವಾಸಿಗಳಾದ ಅಸಾದುಲ್ಲಾ ಖಾನ್, ಅಯೇಷ್ ನಜಮ್ ಹಾಗೂ ಝರೀನ್ ತಾಜ್ ಎಂಬುವರು ಸಲ್ಲಿಸಿದ್ದ ಕ್ರಿಮಿನಲ್ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ಮಾಡಿದೆ.
ಒಮ್ಮೆ ದೋಷಾರೋಪ ಹೊರಿಸಿ ವಿಚಾರಣೆ ಆರಂಭಿಸಿದ ನಂತರ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸುವ ಪ್ರಮೇಯ ಉದ್ಭವಿಸುವುದಿಲ್ಲ ಎಂದು ಕೋರ್ಟ್ ಅಭಿಪ್ರಾಯಪಟ್ಟು ಅರ್ಜಿ ತಿರಸ್ಕರಿಸಿದೆ. ಅಕ್ರಮ ಹಣ ವರ್ಗಾವಣೆ ನಡೆದಿದೆ ಎಂದು ಆರೋಪಿಸಿರುವ ಕೃತ್ಯ ನಡೆದಿರುವುದು ಮಂಡ್ಯದಲ್ಲಿ. ನಾವು ವಾಸಿಸುತ್ತಿರುವುದೂ ಮಂಡ್ಯದಲ್ಲೇ, ಹೀಗಿದ್ದೂ, ನಮ್ಮ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣವನ್ನು ಬೆಂಗಳೂರಿನ ವಿಶೇಷ ನ್ಯಾಯಾಲಯ ವಿಚಾರಣೆಗೆ ಕೈಗೆತ್ತಿಕೊಂಡಿರುವುದು ಸರಿಯಲ್ಲ. ಹೀಗಾಗಿ, ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಕೋರಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದರು.
ಇದನ್ನು ಅಲ್ಲಗಳೆದಿರುವ ಪೀಠ, ಈಡಿ ವಿಚಾರಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಕೇಂದ್ರ ಸರಕಾರವು 2006ರಲ್ಲೇ ಅಧಿಸೂಚನೆ ಹೊರಡಿಸಿದೆ. ಅದರಂತೆ, ಬೆಂಗಳೂರಿನ ವಿಶೇಷ ನ್ಯಾಯಾಲಯಕ್ಕೆ ಮಂಡ್ಯವೂ ಸೇರಿದಂತೆ 14 ಜಿಲ್ಲೆಗಳ ಈಡಿ ಪ್ರಕರಣಗಳ ವಿಚಾರಣಾ ವ್ಯಾಪ್ತಿಯಿದೆ. ಈಗಾಗಲೇ ವಿಚಾರಣಾ ನ್ಯಾಯಾಲಯವು ಆರೋಪಿಗಳ ವಿರುದ್ಧ 2021ರ ಫೆಬ್ರುವರಿ 20ರಂದು ದೋಷಾರೋಪ ಹೊರಿಸಿ ವಿಚಾರಣೆ ಕೈಗೆತ್ತಿಕೊಂಡಿದೆ. ಹೀಗಾಗಿ, ಅರ್ಜಿದಾರರ ಮನವಿ ಪರಿಗಣಿಸಲಾಗದು ಎಂದು ಅರ್ಜಿ ವಜಾಗೊಳಿಸಿದೆ.





