ಕೋವಿಡ್ ಯಶಸ್ವಿ ನಿರ್ವಹಣೆಯಲ್ಲಿ ಸರಕಾರಿ ನೌಕರರ ಪಾತ್ರ ಹಿರಿದು: ದ.ಕ. ಡಿಸಿ ಡಾ.ರಾಜೇಂದ್ರ
ಸರಕಾರಿ ನೌಕರರ ದಿನಾಚರಣೆ: 2021-22ನೆ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ

ಮಂಗಳೂರು, ಎ.21: ಕೋವಿಡ್ ಸಾಂಕ್ರಾಮಿಕ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅದನ್ನು ಯಶಸ್ವಿಯಾಗಿ ನಿರ್ವಹಿಸಲು ಸಾಧ್ಯವಾಗಿದ್ದರೆ ಅದರ ಶ್ರೇಯಸ್ಸು ಸರಕಾರಿ ನೌಕರರಿಗೆ ಸಲ್ಲಬೇಕು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಶ್ಲಾಘಿಸಿದ್ದಾರೆ.
ಅವರು ಇಂದು ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ದ.ಕ. ಜಿಲ್ಲಾಡಳಿತ ಹಾಗೂ ಸರಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ರಾಜ್ಯ ಸರಕಾರಿ ನೌಕರರ ದಿನಾಚರಣೆ ಕಾರ್ಯಕ್ರಮದಲ್ಲಿ 2020-21 ಹಾಗೂ 2021-22ನೇ ಸಾಲಿನ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡುತ್ತಿದ್ದರು.
ಸಮಾಜದಲ್ಲಿ ಅಪವಾದ, ಕುಟುಂಬದ ಒತ್ತಡದ ನಡುವೆಯೂ ಸರಕಾರಿ ನೌಕರರು ತಮ್ಮ ಕೆಲಸವನ್ನು ನಿರ್ವಹಿಸಬೇಕಾಗುತ್ತದೆ. ಕೌಟುಂಬಿಕ ಸಹಕಾರ ಉತ್ತಮವಾಗಿದ್ದಾಗ ಓರ್ವ ನೌಕರ ತನ್ನ ಕರ್ತವ್ಯವನ್ನು ಉತ್ತಮವಾಗಿ ನಿರ್ವಹಿಸಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಕೋವಿಡ್ ಕಡಿಮೆಯಾಗಿದೆ ಎಂದು ನಾವು ಮುಂಜಾಗೃತಾ ಕ್ರಮಗಳನ್ನು ಬದಿಗೊತ್ತಬಾರದು. ದಿಲ್ಲಿಯಲ್ಲಿ ಮತ್ತೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಮುಂದುವರಿಸಬೇಕು ಎಂದು ಜಿಲ್ಲಾಧಿಕಾರಿ ಹೇಳಿದರು.
ಕಾರ್ಯಕ್ರಮದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಳೆದ 30 ವರ್ಷಗಳಿಂದ ಚಾಲಕರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಚಾಲಕ ಕೆ.ಪೂವಪ್ಪ ಸೇರಿದಂತೆ ಎರಡು ಸಾಲಿನಲ್ಲಿ ತಲಾ 10 ಮಂದಿಯಂತೆ 20 ಮಂದಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೊನಾವಣೆ, ಸರಕಾರಿ ನೌಕರರ ಸಂಘದ ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

















