ಶುಕ್ರವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು, ಎ. 21: ನಾಳೆ(ಎ.22)ಯಿಂದ ಮೇ 18ರ ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ರಾಜ್ಯದ ಒಟ್ಟು 1,076 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಒಟ್ಟಾರೆ 6,84,255 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸೇರಿದಂತೆ ಹಲವು ಗಣ್ಯರು ಶುಭ ಕೋರಿದ್ದಾರೆ.
ಸುಗಮವಾಗಿ ಪರೀಕ್ಷೆ ನಡೆಸಲು ಪದವಿಪೂರ್ವ ಶಿಕ್ಷಣ ಇಲಾಖೆ ಸಂಪೂರ್ಣ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳು ಪೈಕಿ 6,00,519 ರೆಗ್ಯುಲರ್, 61,808 ಪುನರಾವರ್ತಿತ, 21,928 ಖಾಸಗಿ ಅಭ್ಯರ್ಥಿಗಳಿದ್ದಾರೆ. ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪರೀಕ್ಷೆ ಸಂಬಂಧಿಸಿದ ಎಲ್ಲ ಕಾರ್ಯಗಳು ಪೊಲೀಸ್ ಬಂದೋಬಸ್ತ್‍ನಲ್ಲಿ ನಡೆಯಲಿದ್ದು, 24/7 ಸಿಸಿಟಿವಿ ಕ್ಯಾಮೆರಾ ನಿಗಾ ಇರಲಿದೆ.
ಸಮವಸ್ತ್ರ ಕಡ್ಡಾಯ: ‘ದ್ವಿತೀಯ ಪಿಯು ಪರೀಕ್ಷೆಗೂ ಸಮವಸ್ತ್ರ ನಿಯಮ ಅನ್ವಯವಾಗುತ್ತದೆ. ಪುನರಾವರ್ತಿತ ಮತ್ತು ಖಾಸಗಿ ಅಭ್ಯರ್ಥಿಗಳಿಗೆ ಸಮವಸ್ತ್ರದಿಂದ ವಿನಾಯಿತಿ ಇರುತ್ತದೆ. ಆದರೆ, ಸಾಮಾನ್ಯ ಧಿರಿಸಿನಲ್ಲಿ ಪರೀಕ್ಷೆಗೆ ಹಾಜರಾಗುವವರು ಸರಕಾರ ಮತ್ತು ಹೈಕೋರ್ಟ್ ಆದೇಶಗಳನ್ನು ಪಾಲಿಸಬೇಕು’ ಎಂದು ಶಿಕ್ಷಣ ನಾಗೇಶ್ ಸೂಚನೆ ನೀಡಿದ್ದಾರೆ.
‘ಪರೀಕ್ಷೆಗೆ ತೆರಳುವ ವಿದ್ಯಾರ್ಥಿಗಳು ಪರೀಕ್ಷೆ ನಡೆಯುವ ದಿನಗಳಂದು ತಮ್ಮ ಹಾಲ್ ಟಿಕೆಟ್ ತೋರಿಸಿ ಉಚಿತವಾಗಿ ಕೆಎಸ್ಸಾರ್ಟಿಸಿ ಸೇರಿದಂತೆ ಸಾರಿಗೆ ಬಸ್‍ಗಳಲ್ಲಿ ಪ್ರಯಾಣಿಸಲು ಸಾರಿಗೆ ಇಲಾಖೆ ಅವಕಾಶ ಕಲ್ಪಿಸಿದೆ. ಯಾವುದೇ ರೀತಿಯ ಆತಂಕವಿಲ್ಲದೆ ಪರೀಕ್ಷೆ ಬರೆಯಬೇಕು' ಎಂದು ಗಣ್ಯರು, ವಿದ್ಯಾರ್ಥಿಗಳಿಗೆ ಶುಭ ಹಾರೈರಿಸಿದ್ದಾರೆ.
‘ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ನಾಳೆ(ಎ.22) ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಖುದ್ದು ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಧೈರ್ಯ ಹೇಳುವುದರ ಜೊತೆಗೆ ಪರೀಕ್ಷೆ ಸಿದ್ಧತೆಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು'
-ಬಿ.ಸಿ.ನಾಗೇಶ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ







