ಕರ್ನಾಟಕ ರಾಜ್ಯ ಮುಕ್ತ ವಿವಿಯ 17ನೇ ಘಟಿಕೋತ್ಸವ: 8,338 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ

ಮೈಸೂರು, ಎ.25: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಹದಿನೇಳನೆ ವಾರ್ಷಿಕ ಘಟಿಕೋತ್ಸವ ಸಮಾರಂಭ ಸೋಮವಾರ ಕರಾಮುವಿಯ ಘಟಿಕೋತ್ಸವ ಭವನದಲ್ಲಿ ನಡೆಯಿತು.
ರಾಷ್ಟ್ರೀಯ ಶಿಕ್ಷಣ ಸಮಿತಿ ಟ್ರಸ್ಟ್ ಗೌರವಾನ್ವಿತ ಕಾರ್ಯದರ್ಶಿ ಎ.ವಿ.ಎಸ್.ಮೂರ್ತಿ, ಟಾಟಾ ಗ್ಲೋಬಲ್ ಸಂಪನ್ಮೂಲ ನಿರ್ವಹಣಾ ಸಂಸ್ಥೆಯ ಉಪಾಧ್ಯಕ್ಷ ಈ.ಎಸ್.ಚಕ್ರವರ್ತಿ, ವಿಆರ್ ಎಲ್ ಸಮೂಹ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಆನಂದ್ ಸಂಕೇಶ್ವರ್ ಇವರುಗಳಿಗೆ ಗೌರವ ಡಾಕ್ಟರೇಟ್ ಪ್ರದಾನಿಸಲಾಯಿತು.
ಸಮಾರಂಭದಲ್ಲಿ 2018–19 ಮತ್ತು 2019–20ರ ಬ್ಯಾಚ್‌ನ 8,338 ವಿದ್ಯಾರ್ಥಿಗಳಿಗೆ ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಯಿತು. ಉತ್ತಮ ಸಾಧನೆ ತೋರಿದ ವಿದ್ಯಾರ್ಥಿಗಳಿಗೆ 48 ಚಿನ್ನದ ಪದಕ, 38 ನಗದು ಬಹುಮಾನಗಳನ್ನು ನೀಡಲಾಯಿತು. 31 ಮಂದಿಗೆ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ರಾಜ್ಯಪಾಲರು, ವಿವಿ ಕುಲಾಧಿಪತಿಯೂ ಆಗಿರುವ ಥಾವರ್ ಚಂದ್ ಗೆಹ್ಲೋಟ್ ಪದವಿ ಪ್ರದಾನ ಮಾಡಿದರು.
ಕರಾಮುವಿ ಕುಲಪತಿ ಡಾ.ಎಸ್.ವಿದ್ಯಾಶಂಕರ್, ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆಯ ನಿರ್ದೇಶಕ ಎ.ಬಿ.ಬಸವರಾಜ್ ಹಾಗೂ ಇತರ ಗಣ್ಯರು ಉಪಸ್ಥಿತರಿದ್ದರು.





