ಉಡುಪಿ; ಅಪಘಾತ ಪ್ರಕರಣ: ಬೈಕ್ ಸವಾರನಿಗೆ ಜೈಲು ಶಿಕ್ಷೆ

ಉಡುಪಿ : ಅತಿವೇಗ ಹಾಗೂ ಅಜಾಗರೂಕತೆಯಿಂದ ಬೈಕ್ ಚಲಾಯಿಸಿ, ಸ್ಕೂಟರ್‌ಗೆ ಢಿಕ್ಕಿ ಹೊಡೆದು ಗಾಯ ಗೊಳಿಸಿದ ಪ್ರಕರಣದ ಆರೋಪಿಗೆ ನಗರದ ಒಂದನೇ ಹೆಚ್ಚುವರಿ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶ ನೀಡಿದೆ.
ಮರ್ವಿನ್ ವಿಲ್ಫ್ರೆಡ್ ಡಿಸೋಜ ಶಿಕ್ಷೆಗೆ ಗುರಿಯಾದ ಆರೋಪಿ. 2017ರ ಅ.5ರಂದು ಕಲ್ಸಂಕ ಗುಂಡಿಬೈಲು ಬಳಿ ಮರ್ವಿನ್ ಬೈಕನ್ನು ಅತೀವೇಗ ಮತ್ತು ಅಜಾಗರೂಕತೆಯಿಂದ ಚಲಾಯಿಸಿ, ಪ್ರಕಾಶ ಶೆಟ್ಟಿ ಎಂಬವರ ಸ್ಕೂಟರ್‌ಗೆ ಢಿಕ್ಕಿ ಹೊಡೆದನು. ಇದರ ಪರಿಣಾಮ ಪ್ರಕಾಶ ಶೆಟ್ಟಿ, ಆತನ ಹೆಂಡತಿ ಹಾಗೂ ಮಗನು ರಸ್ತೆಗೆ ಬಿದ್ದು ಗಾಯಗೊಂಡಿದ್ದರು. ಈ ಬಗ್ಗೆ ಉಡುಪಿ ಸಂಚಾರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಶ್ಯಾಮ ಪ್ರಕಾಶ್ ಆರೋಪಿಗೆ 6 ತಿಂಗಳ ಕಾರಾಗೃಹ ವಾಸ ಶಿಕ್ಷೆ ಹಾಗೂ 1000 ರೂ. ದಂಡ ವಿಧಿಸಿ ಆದೇಶ ನೀಡಿದರು. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕಿ ಮೋಹಿನಿ ಕೆ. ವಾದ ಮಂಡಿಸಿದ್ದಾರೆ.