ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ; ಸಂಪುಟ ಪುನಾರಚನೆ, ವಿಧಾನಸಭೆ ಚುನಾವಣೆ ಬಗ್ಗೆ ಸಮಾಲೋಚನೆ

ಬೆಂಗಳೂರು, ಮೇ 2: `ನಾಯಕತ್ವ ಬದಲಾವಣೆ' ಚರ್ಚೆಗೆ ಬೆನ್ನಲ್ಲೆ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಲಿದ್ದು, ನಾಳೆ(ಮೇ 3) ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಸಲಿರುವ ಶಾ ಅವರು, ಮುಂದಿನ ವಿಧಾನಸಭೆ ಚುನಾವಣೆ ಸಿದ್ಧತೆ ಸಂಬಂಧ ಪಕ್ಷದ ಮುಖಂಡರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಹೇಳಲಾಗಿದೆ.
ಇದೇ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿಯೂ ಆಗಿರುವ ಅರುಣ್ ಸಿಂಗ್ ಅವರು ಸೋಮವಾರ(ಮೇ 2) ರಾತ್ರಿಯೇ ನಗರಕ್ಕೆ ಆಗಮಿಸಿದ್ದು, ಉಭಯ ನಾಯಕರು ನಾಳೆ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡಲಿದ್ದು, ಪಕ್ಷದ ಪದಾಧಿಕಾರಿಗಳೊಂದಿಗೆ ಚರ್ಚಿಸಲಿದ್ದಾರೆ.
ಮೇ 2ರ ರಾತ್ರಿ 11:45ಕ್ಕೆ ಹೊಸದಿಲ್ಲಿಯಿಂದ ಬೆಂಗಳೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ನಗರದ ಖಾಸಗಿ ಹೊಟೇಲ್‍ನಲ್ಲಿ ವಾಸ್ತವ್ಯ ಹೂಡುವರು. ನಾಳೆ(ಮೇ 3) ಬಸವ ಜಯಂತಿ ಅಂಗವಾಗಿ ಇಲ್ಲಿನ ಬಸವೇಶ್ವರ ವೃತ್ತದಲ್ಲಿರುವ ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಲಿದ್ದಾರೆ. ನಂತರ 10.30ಕ್ಕೆ ಬೆಂಗಳೂರಿನ ಸರಕಾರಿ ಕಲಾ ಕಾಲೇಜು ಮೈದಾನದಲ್ಲಿ ನಡೆಯುವ ನೃಪತುಂಗ ವಿಶ್ವವಿದ್ಯಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಗೊತ್ತಾಗಿದೆ.
ಆ ಬಳಿಕ ಮಧ್ಯಾಹ್ನ 12ಕ್ಕೆ ಕನಕಪುರದ ಸಾತನೂರು ಗ್ರಾಮದಲ್ಲಿ ನಡೆಯುವ ನ್ಯಾಟ್‍ಗ್ರಿಡ್ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ಮಧ್ಯಾಹ್ನ 2.30ಕ್ಕೆ ಅಮಿತ್ ಶಾ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನಿವಾಸದಲ್ಲಿ ಭೋಜನಕೂಟದ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 3ರಿಂದ ಸಂಜೆ 5ರ ವರೆಗೂ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಬಿಜೆಪಿಯ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಲಿದ್ದಾರೆ.
ಸಂಜೆ 5ರಿಂದ 7ಗಂಟೆಯವರೆಗೆ ಇಲ್ಲಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುವ `ಖೇಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್' ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲೂ ಭಾಗವಹಿಸಲಿದ್ದು, ಆ ಬಳಿಕ ವಿಶೇಷ ವಿಮಾನದಲ್ಲಿ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ಹೊಸದಿಲ್ಲಿ ತೆರಳಲಿದ್ದಾರೆ ಎಂದು ತಿಳಿಸಲಾಗಿದೆ.







