ಈ ತಿಂಗಳ 10ರೊಳಗೆ ಮುಖ್ಯಮಂತ್ರಿ ಬದಲಾವಣೆಯಾಗಲಿದೆ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಬೆಂಗಳೂರು, ಮೇ 3: ಇದೇ ತಿಂಗಳ 10ರ ಒಳಗೆ ಮುಖ್ಯಮಂತ್ರಿ ಬದಲಾವಣೆ, ಸಂಪುಟ ಪುನಾರಚನೆ ನಿರ್ಧಾರ ಆಗಲಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ಮಂಗಳವಾರ ವಿಜಯಪುರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಪ್ರಧಾನಿ ಮೋದಿ ವಿದೇಶ ಪ್ರವಾಸದಿಂದ ಹಿಂದಿರುಗಿದ ಬಳಿಕ ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಮತ್ತು ಸಚಿವ ಸಂಪುಟ ಪುನಾರಚನೆ ಬಗ್ಗೆ ಪಕ್ಷದ ವರಿಷ್ಠರು ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಸ್ಪಷ್ಟಪಡಿಸಿದರು.
ಎರಡು ದಿನಗಳಲ್ಲಿ ಮೋದಿ ವಿದೇಶ ಪ್ರವಾಸದಿಂದ ಹಿಂದಿರುಗಲಿದ್ದಾರೆ. ಈಗಾಗಲೇ ಪಕ್ಷದ ಹೈಕಮಾಂಡ್ ಅಗತ್ಯ ಮಾಹಿತಿ ಪಡೆದುಕೊಂಡಿದೆ. ದಿಲ್ಲಿಯಲ್ಲಿ ಹೈಪವರ್ ಮೀಟಿಂಗ್ ಆಗಿದೆ. ಸಂದೇಶ ಏನಿದೆಯೋ ಗೊತ್ತಿಲ್ಲ. ಪಕ್ಷದ ದೃಷ್ಟಿಯಿಂದ ಮೋದಿ ಒಳ್ಳೆಯ ನಿರ್ಧಾರವನ್ನೇ ತೆಗೆದುಕೊಳ್ಳಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಚುನಾವಣಾ ಸಿದ್ಧತೆಗಾಗಿ ಅಮಿತ್ ಶಾ ಅವರು ಭೇಟಿ ನೀಡಿದ್ದು, ವರಿಷ್ಠರ ಸಭೆ ನಡೆಸಿ, ಮುಂದಿನ ಚುನಾವಣೆಗೆ ಸಿದ್ಧತೆ ಆರಂಭವಾಗಲಿದೆ ಎಂದು ಯತ್ನಾಳ್ ನುಡಿದರು.





