ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡರ ಆಸ್ಪತ್ರೆಯ ಖರ್ಚು ಸರ್ಕಾರದಿಂದ ಪಾವತಿ: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು : ನಗರದ ಖಾಸಗಿ ಆಸ್ಪತ್ರೆಯಲ್ಲಿ ಹೃದಯ ಶಸ್ತ್ರಚಿಕಿತ್ಸೆಗೆ ಒಳಗಾಗಿರುವ ಹಾಲಕ್ಕಿ ಬುಡಕಟ್ಟು ಸಮುದಾಯದ ಹೋರಾಟಗಾರ್ತಿ, ಹಿರಿಯ ಜಾನಪದ ಹಾಡುಗಾರ್ತಿ, ಪದ್ಮಶ್ರೀ ಪುರಸ್ಕೃತ ಸುಕ್ರಿ ಬೊಮ್ಮಗೌಡರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸಲಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ಮಂಗಳವಾರ ಸುಕ್ರಜ್ಜಿ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯ ಸೂಚನೆಯ ಮೇರೆಗೆ ಆಸ್ಪತ್ರೆಗೆ ಆಗಮಿಸಿ ಆರೋಗ್ಯ ವಿಚಾರಿಸಿ ಸುಕ್ರಿ ಬೊಮ್ಮಗೌಡರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರಕಾರ ಭರಿಸುವ ಭರವಸೆಯನ್ನು ನೀಡಿದೆ. ಅವರ ಆರೋಗ್ಯದ ಮೇಲೆ ವಿಶೇಷ ನಿಗಾ ಇರಿಸಲು ವೈದ್ಯರಿಗೆ ಸೂಚನೆ ನೀಡಲಾಯಿತು ಎಂದರು.
ವೈದ್ಯ ಡಾ.ವಲೀಂ ಮಾತನಾಡಿ ಸುಕ್ರಿ ಬೊಮ್ಮಗೌಡರಿಗೆ ವಯೋ ಸಹಜವಾಗಿ ಎದೆಬಡಿತ ಕೊಂಚ ಕಡಿಮೆಯಾಗಿತ್ತು. ಶಸ್ತ್ರಚಿಕಿತ್ಸೆ ಬಳಿಕ ಅವರ ಆರೋಗ್ಯ ಸ್ಥಿರವಾಗಿದೆ. ಇನ್ನು ಒಂದೆರಡು ದಿನದೊಳಗೆ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ ಎಂದರು.
ಸುಕ್ರಿ ಬೊಮ್ಮಗೌಡ ಶನಿವಾರ ಆಸ್ಪತ್ರೆಗೆ ದಾಖಲಾಗಿದ್ದರು. ರವಿವಾರ ಹೃದಯದ ಲಘು ಶಸ್ತ್ರಚಿಕಿತ್ಸೆ ನೆರವೇರಿಸಿ, ನಾಲ್ಕು ಸ್ಟಂಟ್‌ಗಳನ್ನು ಅಳವಡಿಸಲಾಗಿದೆ. ಇದೀಗ ವಾರ್ಡ್‌ನಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದರು.







