ನೆಲಮಂಗಲದಲ್ಲಿ ಶುಕ್ರವಾರ ಜನತಾ ಜಲಧಾರೆ ಸಮಾವೇಶ | ಐದು ಲಕ್ಷ ಜನರು ಭಾಗವಹಿಸುವ ನಿರೀಕ್ಷೆ: ಕುಮಾರಸ್ವಾಮಿ

ಬೆಂಗಳೂರು, ಮೇ 12: ಎಪ್ರಿಲ್ 16ರ ಹನುಮ ಜಯಂತಿ ದಿನ ಆರಂಭವಾದ ಜನತಾ ಜಲಧಾರೆ ಕಾರ್ಯಕ್ರಮ ರಾಜ್ಯಾದ್ಯಂತ ಯಶಸ್ವಿಯಾಗಿ ನಡೆದಿದ್ದು, ನಾಳೆ(ಮೇ 13) ನೆಲಮಂಗಲ ಸಮೀಪ ‘ಜನತಾ ಜಲಧಾರೆ' ಕಾರ್ಯಕ್ರಮದ ಸಮಾರೋಪ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ನಾಲ್ಕೈದು ಲಕ್ಷ ಜನರು ಸೇರುವ ನಿರೀಕ್ಷೆ ಇದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.
ಗುರುವಾರ ನಗರದಲ್ಲಿ ಮಾತನಾಡಿದ , ‘ರಾಜ್ಯದ ನೀರಾವರಿ ಯೋಜನೆಗಳನ್ನೂ ಜಾರಿ ಮಾಡುವ ನಿಟ್ಟಿನಲ್ಲಿ ಗಂಗಾ ಮಾತೆಯ ಸಾಕ್ಷಿಯಾಗಿ ಸಂಕಲ್ಪ ಮಾಡಲಾಗುವುದು. ಪಕ್ಷಕ್ಕೆ ಪೂರ್ಣ ಪ್ರಮಾಣದ ಅಧಿಕಾರ ನೀಡಿದರೆ ಎಲ್ಲ ಯೋಜನೆಗಳನ್ನು ಅನುಷ್ಠಾನಕ್ಕೆ ತರಲಾಗುವುದು ಎಂದು ಹೇಳಿದರು.
‘ನೆಲಮಂಗಲ ಸಮೀಪದ ಬಾವಿಕೆರೆ ಬಳಿಯ ಬೆಂಗಳೂರು-ಹಾಸನ ಹೆದ್ದಾರಿಯ ಪಕ್ಕದ ಬೃಹತ್ ಮೈದಾನದಲ್ಲಿ ಮೇ ನಾಳೆ ಮಧ್ಯಾಹ್ನ 3ಗಂಟೆಗೆ ಸಮಾವೇಶ ಆರಂಭವಾಗಲಿದೆ. ಸಮಾವೇಶದಲ್ಲಿ ಮಾಜಿ ಪ್ರಧಾನಿ ದೇವೇಗೌಡರು, ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹೀಂ, ಕೋರ್ ಕಮಿಟಿ ಅಧ್ಯಕ್ಷ ಬಂಡೆಪ್ಪ ಕಾಶೆಂಪೂರ್, ರಾಷ್ಟ್ರೀಯ ಸಂಸದೀಯ ಮಂಡಳಿ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ಸೇರಿದಂತೆ ಪಕ್ಷದ ಎಲ್ಲ ಶಾಸಕರು, ಮುಖಂಡರು, ಮುಂದಿನ ವಿಧಾನಸಭೆ ಚುನಾವಣೆಯ ಅಭ್ಯರ್ಥಿಗಳ ಭಾಗಿಯಾಗಲಿದ್ದಾರೆ ಎಂದರು.
ಸಮಾವೇಶದಲ್ಲಿ ಭಾಗಿಯಾಗುವ ಎಲ್ಲರಿಗೂ ದಾಸೋಹದ ವ್ಯವಸ್ಥೆ ಮಾಡಲಾಗಿದೆ. ಪಾಕಿರ್ಂಗ್, ಊಟ ಇತ್ಯಾದಿಗಳ ವ್ಯವಸ್ಥೆಯನ್ನು ಒದಗಿಸಲಾಗಿದೆ. ಜನತಾ ಜಲಧಾರೆ ಸಮಾವೇಶದಲ್ಲಿ ಗಂಗಾ ಪೂಜೆ ಮತ್ತು ಗಂಗಾ ಆರತಿ ಕಾರ್ಯಕ್ರಮದಲ್ಲಿ ಪ್ರಮುಖ ಹೈಲೆಟ್ ಆಗಿದೆ. ನಮ್ಮ ನೆಲದ ಪರಂಪರೆಗೆ ಧಕ್ಕೆ ಆಗದಂತೆ ಸಮಾವೇಶವನ್ನು ಆಯೋಜಿಸಲಾಗಿದೆ. ಜಲಧಾರೆ ಕಾರ್ಯಕ್ರಮದಲ್ಲಿ ಸಂಜೆ 6.30ಕ್ಕೆ ಗಂಗಾ ಆರತಿ ಕಾರ್ಯಕ್ರಮ ನಡೆಯಲಿದೆ. ಇದಕ್ಕಾಗಿ 20 ಜನ ಪಂಡಿತರ ವಿಶೇಷ ತಂಡ ವಾರಣಾಸಿಯಿಂದ ಬರುತ್ತಿದ್ದಾರೆ.
180 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಾಗಿದೆ. ಅಷ್ಟೂ ಕಡೆ ಜಲಧಾರೆ ಕಾರ್ಯಕ್ರಮ ನಡೆದಿದೆ. 15 ಗಂಗಾರಥಗಳು ಯಶಸ್ವಿಯಾಗಿ ಸಂಚರಿಸಿವೆ. ಇವುಗಳ ಮೂಲಕ ರಾಜ್ಯದ ಎಲ್ಲ ಜೀವ ನದಿಗಳಿಂದ ಸಂಗ್ರಹ ಮಾಡಲಾಗಿರುವ ಪುಣ್ಯಜಲವನ್ನು ಒಂದು ಬೃಹತ್ ಕಲಶಕ್ಕೆ ತುಂಬಿಸಿ ಸಮಾವೇಶದಲ್ಲಿ ಪೂಜೆ ನೆರವೇರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಜಲಧಾರೆಯ ಉದ್ದೇಶ: ನೀರಾವರಿ ವಿಷಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ರಾಜ್ಯಕ್ಕೆ ಅನ್ಯಾಯ ಮಾಡಿವೆ. 75 ವರ್ಷಗಳಲ್ಲಿ ಎರಡೂ ಪಕ್ಷಗಳೂ ಜನತೆಗೆ ವಂಚಿಸಿವೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡಿ ಎಂದು ಸರಕಾರ ಕೇಂದ್ರಕ್ಕೆ ಮನವಿ ಮಾಡಿದೆ. ಎತ್ತಿನಹೊಳೆ, ಮಹದಾಯಿ ಯೋಜನೆಗೂ ಸಕಾರಾತ್ಮಕ ಸ್ಪಂದನೆ ಸಿಗುತ್ತಿಲ್ಲ. ಯೋಜನೆಗಳನ್ನು ಜಾರಿಗೊಳಿಸದೆ ಸಬೂಬು ನೀಡಿ ತಳ್ಳುತ್ತಿದ್ದಾರೆ. ರಾಜ್ಯದ ಸಂಪತ್ತು ದುರ್ಬಳಕೆ ಆಗುತ್ತಿದೆ. ರಾಜ್ಯದಲ್ಲಿ ಸರಕಾರಕ್ಕೆ ಯಾವುದೂ ಅಸಾಧ್ಯ ಇಲ್ಲ. ಸರಿಯಾದ ರೀತಿಯಲ್ಲಿ ನದಿ ನೀರು ಉಪಯೋಗಿಸುವ ಸಂಕಲ್ಪ ಬರಬೇಕು. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಸ್ವತಂತ್ರ ಸರಕಾರ ಬಂದರೆ 5 ವರ್ಷದಲ್ಲಿ ನದಿ ನೀರು ಬಳಕೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
‘ಜನತಾ ಜಲಧಾರೆ ಕಾರ್ಯಕ್ರಮ ಒಂದು ವಿಶೇಷ ಕಾರ್ಯಕ್ರಮ. ನನೆಗುದಿಗೆ ಬಿದ್ದಿರುವ ರಾಜ್ಯದ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವುದು ಮಾತ್ರವಲ್ಲದೆ, ಮುಂದಿನ ನೂರು ವರ್ಷಗಳ ಅವಧಿಯಲ್ಲಿ ನೀರಿನ ಸಮಸ್ಯೆ ಆಗದಂತೆ ದೂರದೃಷ್ಟಿ ಇಟ್ಟುಕೊಂಡು ಯೋಜನೆಗಳನ್ನು ರೂಪಿಸಲಾಗುವುದು'
-ಎಚ್.ಡಿ.ಕುಮಾರಸ್ವಾಮಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ







