ಡೆಂಗ್ ಹರಡಲು ರಬ್ಬರ್ ಟ್ಯಾಪಿಂಗ್ ಕಾರಣ: ಶಾಸಕ ಸುಕುಮಾರ್ ಶೆಟ್ಟಿ ಆರೋಪ
ಕುಂದಾಪುರ : ಮುದೂರು ಪಶ್ಚಿಮ ಘಟ್ಟದ ತಪ್ಪಲು ಪ್ರದೇಶವಾಗಿದ್ದು ರಬ್ಬರ್ ಟ್ಯಾಪಿಂಗ್ ಮಾಡುವ ಚಿಪ್ಪಿನಲ್ಲಿ ಮಳೆ ನೀರು ನಿಂತು ಸೊಳ್ಳೆ ಉತ್ಪತ್ತಿಯಾಗಿ ಡೆಂಗ್ ಹಬ್ಬಿದೆ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಜೊತೆ ಸಂಪರ್ಕದಲ್ಲಿದ್ದು ಅಗತ್ಯ ಕ್ರಮಕ್ಕೆ ಸೂಚನೆ ನೀಡಲಾಗಿದೆ ಎಂದು ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಹೇಳಿದ್ದಾರೆ.
ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ, ಡೆಂಗ್ ಪೀಡಿತರ ಯೋಗಕ್ಷೇಮ ವಿಚಾರಿಸಿದ ಬಳಿಕ ಅವರು ಸುದ್ದಿಗಾರರ ಜೊತೆ ಮಾತನಾಡುತ್ತಿದ್ದರು. ಸೋಮವಾರ ಜಿಲ್ಲಾ ಉಸ್ತುವಾರಿ ಸಚಿವರು ಕೂಡ ಮುದೂರಿಗೆ ಆಗಮಿಸಲಿದ್ದಾರೆ. ಕಳೆದ ಒಂದು ತಿಂಗಳಿನಿಂದ ಡೆಂಗ್ ಪೀಡಿತರಿಗೆ ಬೇಕಾದ ಅಗತ್ಯ ವ್ಯವಸ್ಥೆಗಳನ್ನು ಗ್ರಾಪಂ ಹಾಗೂ ಸ್ಥಳೀಯ ಸಹಕಾರಿ ಸಂಘಗಳ ಮೂಲಕ ಮಾಡುತ್ತಿದ್ದು ಕ್ಷಣಕ್ಷಣಕ್ಕೂ ಮಾಹಿತಿ ಪಡೆದು ಅಧಿಕಾರಿಗಳ ಜೊತೆ ಸಂಪರ್ಕ ಮಾಡುತ್ತಿದ್ದೇನೆ ಎಂದರು.
ಈ ಸಂದರ್ಭದಲ್ಲಿ ಬೈಂದೂರು ಕ್ಷೇತ್ರ ಬಿಜೆಪಿ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಜಡ್ಕಲ್ ಗ್ರಾಮ ಪಂಚಾಯತ್ ಅಧ್ಯಕ್ಷೆ, ಉಪಾಧ್ಯಕ್ಷರು ಹಾಜರಿದ್ದರು.