ಉಡುಪಿ: ಮೇ 17, 19ಕ್ಕೆ ಆರೆಂಜ್, 18ಕ್ಕೆ ರೆಡ್ ಅಲರ್ಟ್ : ಜಿಲ್ಲಾಧಿಕಾರಿ ಕೂರ್ಮಾರಾವ್
ಕರಾವಳಿ ಭಾಗದಲ್ಲಿ ಮುಂದಿನ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ

ಕೂರ್ಮಾರಾವ್
ಉಡುಪಿ : ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಯನ್ನು ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ನೀಡಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ ಕೂರ್ಮಾರಾವ್ ಎಂ. ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸೋಮವಾರ ಅಪರಾಹ್ನ ಒಂದು ಗಂಟೆಯ ಹವಾಮಾನ ವರದಿಯಂತೆ ಉಡುಪಿ ಜಿಲ್ಲೆಯಲ್ಲಿ ಮೇ 17 ಮಂಗಳವಾರ ಹಾಗೂ ಮೇ 19ರ ಗುರುವಾರ ಆರೆಂಜ್ ಅಲರ್ಟ್ ಹಾಗೂ ಮೇ 18ರ ಬುಧವಾರ ರೆಡ್ ಅಲರ್ಟ್ನ್ನು ಘೋಷಿಸಲಾಗಿದೆ. ಈ ದಿನಗಳಲ್ಲಿ ಹೆಚ್ಚು ಮಳೆಯಾಗುವ ಸಾದ್ಯತೆ ಇದ್ದು, ಜಿಲ್ಲಾಡಳಿತ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಕೆಲವು ಸೂಚನೆಗಳನ್ನು ಹಾಗೂ ಎಚ್ಚರಿಕೆಯನ್ನು ನೀಡಿದೆ.
ಸಾರ್ವಜನಿಕರು ನದಿ, ನೀರಿರುವ ಪ್ರದೇಶ, ಸಮುದ್ರಕ್ಕೆ ಇಳಿಯದಂತೆ ಕಟ್ಟೆಚ್ಚರ ವಹಿಸಬೇಕು. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಈ ಸಂದರ್ಭದಲ್ಲಿ ಮಕ್ಕಳು, ಸಾರ್ವಜನಿಕರು ಅಪಾಯಕಾರಿ ವಿದ್ಯುತ್ ಕಂಬ, ಕಟ್ಟಡ ಹಾಗೂ ಮರಗಳ ಕೆಳಗೆ ನಿಲ್ಲದಂತೆ ಹಾಗೂ ತಗ್ಗು ಪ್ರದೇಶಗಳಲ್ಲಿ ವಾಸಿಸುವ ಜನರು ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಸೂಚಿಸಲಾಗಿದೆ.
ಅಲ್ಲದೇ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ನಿಯೋಜನೆಗೊಂಡ ನೋಡಲ್ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿಭಾಯಿಸಲು ತಯಾರಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳ ಹೇಳಿಕೆ ತಿಳಿಸಿದೆ.
ಮೀನುಗಾರರಿಗೆ ಎಚ್ಚರಿಕೆ: ಮುಂದಿನ ಮೂರು ದಿನಗಳಲ್ಲಿ ಪಶ್ಚಿಮ ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯುವ ಬೀಸುವ ಸಾಧ್ಯತೆ ಇರುವುದರಿಂದ ಕರಾವಳಿಯ ಮೂರು ಜಿಲ್ಲೆಗಳ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರದಂದು ಮಿಂಚು-ಗುಡುಗು ಹಾಗೂ ಬಿರುಗಾಳಿಯಿಂದ ಕೂಡಿದ 65 ಮಿ.ಮೀ.ಗೂ ಅಧಿಕ ಮಳೆ ಸುರಿಯುವ ಸಾಧ್ಯತೆ ಇದೆ. ಅದೇ ರೀತಿ ಮೇ 18ರಿಂದ 20ರವರೆಗೆ ಮಳೆಯ ಪ್ರಮಾಣ 115ರಿಂದ 205ಮಿ..ಮೀ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಲಾದೆ.