ಡೆಂಗ್ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಸಚಿವ ಅಂಗಾರ
ಮುದೂರು (ಕೊಲ್ಲೂರು) : ಕೊಲ್ಲೂರು ವ್ಯಾಪ್ತಿಯ ಮುದೂರು ಮತ್ತು ಜಡ್ಕಲ್ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಡೆಂಗಿ ಪ್ರಕರಣಗಳನ್ನು ನಿಯಂತ್ರಿಸಲು ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಂಡು, ಡೆಂಗಿ ಪ್ರಕರಣಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಕಾರ್ಯನಿರ್ವಹಿಸುವಂತೆ ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ ನೀಡಿದ್ದಾರೆ.
ಸೋಮವಾರ ಕೊಲ್ಲೂರು ವ್ಯಾಪ್ತಿಯ ಮುದೂರು ಮತ್ತು ಜಡ್ಕಲ್ನ ಕೆಲವು ಡೆಂಗಿ ಪೀಡಿತರ ಮನೆಗಳಿಗೆ ಭೇಟಿದ ಬಳಿಕ ಆಶಾ ಹಾಗೂ ಆರೋಗ್ಯ ಕಾರ್ಯಕರ್ತರು, ಆರೋಗ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಸಚಿವರು ಮಾತನಾಡಿದರು.
ಆಶಾ ಮತ್ತು ಆರೋಗ್ಯ ಕಾರ್ಯಕರ್ತರು ಈ ಗ್ರಾಮಗಳ ವ್ಯಾಪ್ತಿಯ ಪ್ರತಿ ಮನೆಗಳಿಗೆ ಭೇಟಿ ನೀಡಿ, ಮನೆಯ ಸುತ್ತಮುತ್ತ ಸ್ವಚ್ಛತೆ ಕಾಪಾಡುವ ಮತ್ತು ನೀರು ಶೇಖರಣೆಯಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅರಿವು ಮೂಡಿಸುವಂತೆ ಹಾಗೂ ಆರೋಗ್ಯ ಇಲಾಖೆ ವತಿಯಿಂದ ಡೆಂಗಿ ಕುರಿತು ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಅವರು ಸೂಚಿಸಿದರು.
ರೋಗ ಹರಡುವ ಸೊಳ್ಳೆಗಳ ನಿಯಂತ್ರಣಕ್ಕೆ ಅಗತ್ಯ ಕಾರ್ಯಕ್ರಮ ಕೈಗೊಳ್ಳಬೇಕು. ಸೊಳ್ಳೆ ಕಡಿತದಿಂದ ಪಾರಾಗಲು ಅಗತ್ಯವಿರುವ ಸೊಳ್ಳೆ ಪರದೆ ಮತ್ತು ಡಿಎಂಪಿ ತೈಲವನ್ನು ನೀಡುವಂತೆ ಹಾಗೂ ಗ್ರಾಮಗಳಾದ್ಯಂತ ನಿರಂತರವಾಗಿ ಫಾಗಿಂಗ್ ಮಾಡುವಂತೆ ಸೂಚಿಸಿದರು.
ಈ ಭಾಗದಲ್ಲಿ ಡೆಂಗಿ ನಿಯಂತ್ರಣಕ್ಕೆ ಅಗತ್ಯವಿರುವ ಇನ್ನೂ ಹೆಚ್ಚಿನ ಕ್ರಮಗಳ ಕುರಿತಂತೆ ಜಿಲ್ಲಾಧಿಕಾರಿಗಳೊಂದಿಗೆ ಚಿರ್ಚಿಸಲಾಗುವುದು ಎಂದು ಸಚಿವರು ತಿಳಿಸಿದರು.
ಬೈಂದೂರು ಶಾಸಕ ಬಿ.ಎಂ.ಸುಕುಮಾರ ಶೆಟ್ಟಿ, ಜಡ್ಕಲ್ ಗ್ರಾಪಂ ಅಧ್ಯಕ್ಷೆ ವನಜಾಕ್ಷಿ ಶೆಟ್ಟಿ, ಉಪಾಧ್ಯಕ್ಷ ಲಕ್ಷ್ಮಣ ಶೆಟ್ಟಿ, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಶೀಲ್ದಾರ್ ಶೋಭಾಲಕ್ಷ್ಮಿ,, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ (ಪ್ರಭಾರ) ಡಾ.ಚಿದಾನಂದ ಸಂಜು, ಕುಂದಾಪುರ ತಾಲೂಕು ಆರೋಗ್ಯಾಧಿ ಕಾರಿ ಡಾ.ರಾಜೇಶ್ವರಿ ಮತ್ತಿತರರು ಉಪಸ್ಥಿತರಿದ್ದರು.