ಡಿ.21ರಿಂದ ದ.ಕ. ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಸಾಂಸ್ಕೃತಿಕ ಜಾಂಬೂರಿ
ಮಂಗಳೂರು : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ರಾಜ್ಯ ಹಾಗೂ ದ.ಕ. ಜಿಲ್ಲಾ ಸಂಸ್ಥೆಗಳ ವತಿಯಿಂದ ಆಳ್ವಾಸ್ ಶಿಕ್ಷಣ ಸಂಸ್ಥೆಯ ಸಹಯೋಗದಲ್ಲಿ ಇದೇ ಮೊದಲ ಬಾರಿಗೆ ವಿಶ್ವ ಸಾಂಸ್ಕೃತಿಕ ಜಾಂಬೂರಿಯನ್ನು ಡಿಸೆಂಬರ್ 21ರಿಂದ 27ರವರೆಗೆ ಹಮ್ಮಿಕೊಂಡಿದೆ.
ದೇಶದಲ್ಲಿಯೇ ಮೊದಲ ಬಾರಿಗೆ ನಡೆಯುತ್ತಿರುವ ಈ ವಿಶ್ವ ಜಾಂಬೂರಿಯು ದ.ಕ. ಜಿಲ್ಲೆಯ ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ನಡೆಸಲು ಎಲ್ಲಾ ಸಿದ್ಧತೆಗಳನ್ನು ಆರಂಭಿಸಲಾಗಿದೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ಮುಖ್ಯ ಆಯುಕ್ತ ಪಿ.ಜಿ.ಆರ್. ಸಿಂಧ್ಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಈ ಬಗ್ಗೆ ಮಾಹಿತಿ ನೀಡಿದ ಅವರು, ಏಳು ದಿನಗಳ ಕಾಲ ನಡೆಯಲಿರುವ ಈ ಶಿಬಿರದಲ್ಲಿ ಭಾರತ ಅಲ್ಲದೆ ಇತರ ದೇಶಗಳು ಸೇರಿದಂತೆ ಸುಮಾರು 50 ಸಾವಿರದಿಂದ 75 ಸಾವಿರ ಮಂದಿ ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಭಾಗವಹಿಸಲಿದ್ದಾರೆ ಎಂದರು.
ಶಿಬಿರದಲ್ಲಿ ಹಲವಾರು ಚಟುವಟಿಕೆಗಳು, ಕಾರ್ಯಕ್ರಮಗಳು, ತರಬೇತಿಗಳು ನಡೆಯಲಿದ್ದು, ವಿವಿಧ ದೇಶ, ರಾಜ್ಯ ಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನವೂ ನಡೆಯಲಿದೆ. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದ ಗಣ್ಯರು ಕೂಡಾ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಿದ್ಧತೆಗಳನ್ನು ಆರಂಭಿಸ ಲಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ದ.ಕ. ಜಿಲ್ಲಾ ಮುಖ್ಯ ಆಯುಕ್ತರಾದ ಡಾ. ಎಂ. ಮೋಹನ್ ಆಳ್ವ ತಿಳಿಸಿದರು.
ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಾಗಿ ಮೀಸಲಿಟ್ಟಿರುವ ಜಾಗದಲ್ಲಿ ಯುವ ಶಕ್ತಿ ಕೇಂದ್ರ ರಚನೆಗೆ ಸಿದ್ಧತೆಗಳನ್ನು ಮಾಡಲಾಗುತ್ತಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಪ್ರತಿಕ್ರಿಯಿಸಿದರು.
ಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಕಾರ್ಯದರ್ಶಿ ಗಂಗಪ್ಪ ಗೌಡ, ರಾಜ್ಯ ಸಂಘಟನಾ ಆಯುಕ್ತ ಪ್ರಭಾಕರ ಭಟ್ ಉಪಸ್ಥಿತರಿದ್ದರು.







