ಚೀನಾ ಪ್ರಜೆಗಳಿಗೆ ವೀಸಾ ಪ್ರಕರಣ: ಕಾರ್ತಿ ಚಿದಂಬರಂಗೆ ಮೇ 30ರ ವರೆಗೆ ಮಧ್ಯಂತರ ರಕ್ಷಣೆ

photo: pti
ಹೊಸದಿಲ್ಲಿ, ಮೇ 26: ಚೀನಾ ಪ್ರಜೆಗಳಿಗೆ ವೀಸಾ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಅವರನ್ನು 2022 ಮೇ 30ರ ವರೆಗೆ ಬಂಧಿಸದಂತೆ ರೋಸ್ ಅವೆನ್ಯೂ ನ್ಯಾಯಾಲಯ ಗುರುವಾರ ಮಧ್ಯಂತರ ರಕ್ಷಣೆ ನೀಡಿದೆ.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಪ್ರಕರಣ ದಾಖಲಿಸಿದ ಹಿನ್ನೆಯಲ್ಲಿ ಜಾರಿ ನಿರ್ದೇಶನಾಲಯ ಕಾರ್ತಿ ಚಿದಂಬರಂ ಅವರ ವಿರುದ್ಧ ಇತ್ತೀಚೆಗೆ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿತ್ತು.
2022 ಮೇ 30ರಂದು ಸಲ್ಲಿಸಲಾದ ನಿರೀಕ್ಷಣಾ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶ ಎಂ.ಕೆ. ನಾಗಪಾಲ್ ಅವರು ಗುರುವಾರ ಕಾರ್ತಿ ಚಿದಂಬರಂ ಅವರಿಗೆ ಮಧ್ಯಂತರ ರಕ್ಷಣೆ ನೀಡಿದರು. ಅಲ್ಲದೆ, ಜಾರಿ ನಿರ್ದೇಶನಾಲಯಕ್ಕೆ ನೋಟಿಸು ಜಾರಿ ಮಾಡಿದರು.
ಪ್ರಕರಣಕ್ಕೆ ಸಂಬಂಧಿಸಿ ಕಾರ್ತಿ ಚಿದಂಬರಂ ಅವರ ಪರವಾಗಿ ಹಿರಿಯ ನ್ಯಾಯವಾದಿ ಕಪಿಲ್ ಸಿಬಲ್ ಹಾಗೂ ನ್ಯಾಯವಾದಿಗಳಾದ ಅರ್ಷದೀಪ್ ಸಿಂಗ್, ಪ್ರತೀಕ್ ಚಡ್ಡಾ ಹಾಜರಾಗಿದ್ದರು.
ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂ ಭಾಗಿಯಾಗಿದ್ದಾರೆಂದು ಹೇಳಲಾದ ಚೀನಾ ವೀಸಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಹಣ ಅಕ್ರಮ ವರ್ಗಾವಣೆ ಪ್ರಕರಣ ದಾಖಲಿಸಿತ್ತು ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.





