ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ ಶರ್ಮಾ ಅಧಿಕಾರ ಸ್ವೀಕಾರ

ಬೆಂಗಳೂರು, ಮೇ 31: ಭಾರತೀಯ ಆಡಳಿತ ಸೇವೆಯ ಹಿರಿಯ ಅಧಿಕಾರಿ ವಂದಿತಾ ಶರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಇಂದು ಸಂಜೆ ಅಧಿಕಾರ ಸ್ವೀಕರಿಸಿದರು.
ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ಪಿ ರವಿಕುಮಾರ್ ಅವರ ವಯೋ ನಿವೃತ್ತಿಯಿಂದ ತೆರವಾದ ಹುದ್ದೆಗೆ ಕರ್ನಾಟಕ ವೃಂದದ ಭಾರತೀಯ ಆಡಳಿತ ಸೇವೆಯ 1986 ನೇ ಸಾಲಿನ ತಂಡದ ವಂದಿತಾ ಶರ್ಮಾ ಉತ್ತರಾಧಿಕಾರಿಯಾಗಿದ್ದಾರೆ.
ವಂದಿತಾ ಶರ್ಮಾ ಅವರು ರಾಜ್ಯದಲ್ಲಿ ಮುಖ್ಯ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸುತ್ತಿರುವ ನಾಲ್ಕನೇ ಮಹಿಳೆಯಾಗಿದ್ದಾರೆ.
ಅಂತೆಯೇ, ರಾಜ್ಯ ಸರ್ಕಾರದ 39 ನೇ ಮುಖ್ಯ ಕಾರ್ಯದರ್ಶಿಯಾಗಿದ್ದಾರೆ.
ವಂದಿತಾ ಶರ್ಮಾ ಪರಿಚಯ:
ಪಂಜಾಬ್ ಮೂಲದ ವಂದಿತಾ ಶರ್ಮಾ ರಾಜ್ಯ ಐಎಎಸ್ ಅಧಿಕಾರಿಗಳ ಸಂಘದ ಅಧ್ಯಕ್ಷೆಯಾಗಿದ್ದಾರೆ. ಸಮಾಜಶಾಸ್ತ್ರದಲ್ಲಿ ಪದವಿ ಹಾಗು ಇಂಗ್ಲೀಷ್ ಸಾಹಿತ್ಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ವಂದಿತ ಅವರು ದಕ್ಷ ಅಧಿಕಾರಿ ಎಂದು ಹೆಸರಾದವರು. 36 ವರ್ಷಗಳ ಸೇವಾವಧಿಯಲ್ಲಿ ಜಿಲ್ಲಾಡಳಿತ, ಕಂದಾಯ, ಕೃಷಿ, ನಗರಾಭಿವೃದ್ಧಿ, ಗ್ರಾಮೀಣಾಭಿವೃದ್ಧಿ ಸಹಿತ ಹಲವು ಇಲಾಖೆಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಲಸಿಕೆ ವಿತರಣೆಗೆ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದ ಅವರು ಕೇಂದ್ರ ಸರ್ಕಾರದಲ್ಲಿ ಬಾಹ್ಯಾಕಾಶ ಇಲಾಖೆಯಲ್ಲೂ ಕಾರ್ಯ ನಿರ್ವಹಿಸಿದ್ದರು. ವಂದಿತಾ ಅವರ ಪತಿ ಐಎಸ್‌ಎನ್ ಪ್ರಸಾದ್ ಕೂಡ ಹಿರಿಯ ಐಎಎಸ್ ಅಧಿಕಾರಿಯಾಗಿದ್ದು, ರಾಜ್ಯದ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಈಗ ವಂದಿತಾ ಶರ್ಮಾ ಮುಖ್ಯ ಕಾರ್ಯದರ್ಶಿಯಾಗಿ ಇಡೀ ರಾಜ್ಯದ ಅಧಿಕಾರ ಶಾಹಿಯ ಚುಕ್ಕಾಣಿ ಹಿಡಿಯಲಿದ್ದಾರೆ. ವಂದಿತಾ ಅವರ ಅವಧಿ ಮುಂದಿನ ನವೆಂಬರ್ 2023 ರವರೆಗೆ ಇರಲಿದೆ.








