ವಿದ್ಯಾರ್ಥಿಗಳಿಗೆ ತಾರ್ಕಿಕ ಚಿಂತನೆ ಅಗತ್ಯ: ಬಸವರಾಜ ಬೊಮ್ಮಾಯಿ

ಮಂಗಳೂರು: ವಿದ್ಯಾರ್ಥಿಗಳಿಗೆ ತಾರ್ಕಿಕ ಚಿಂತನೆ ಅಗತ್ಯ, ಇದರಿಂದ ಎಲ್ಲಾ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲಾ ಪ್ರವಾಸ ಕೈಗೊಂಡಿರುವ ಸಿಎಂ ಇಂದು ಸಂಜೆ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳೊಂದಿಗಿನ ಸಂವಾದ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.
ನಾಡಿನ ಜನರಿಗೆ ಅನ್ನ ನೀಡುವ ರೈತರ ಬದುಕು ಸಂಕಷ್ಟದಲ್ಲಿದೆ. ಅದಕ್ಕಾಗಿ ರೈತರ ಮಕ್ಕಳ ಶಿಕ್ಷಣ ಬಡತನದಿಂದ ಕುಂಠಿತವಾಗಬಾರದು ಎಂದು ರೈತ ನಿಧಿ ಯೋಜನೆ ಹಮ್ಮಿಕೊಂಡಿದ್ದೇನೆ. 21 ಶತಮಾನ ಜ್ಞಾನ ಪಡೆದುಕೊಂಡವರ ಶತಮಾನ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಪ್ರಯತ್ನಿಸಬೇಕು. ಜನರ ಗೌರವ ಪಡೆಯಲು ಸಾಧನೆ ಮಾಡಬೇಕು. ಓರ್ವ ಸಾಧಕ ಸಾವಿನ ನಂತರವೂ ಬದುಕುತ್ತಾನೆ. ನಮ್ಮ ಹಣೆಬರಹವನ್ನು ನಾವೇ ಬರೆಯುತ್ತೇವೆ ಎನ್ನುವ ನಂಬಿಕೆ ವಿದ್ಯಾರ್ಥಿಗಳು ಇಟ್ಟು ಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿವಿ ಮಾತು ಹೇಳಿದರು.
ನವ ಕರ್ನಾಟಕ ದಿಂದ ನವಭಾರತ ನಿರ್ಮಾಣ ಮಾಡೋಣ ಎಂದು ಮುಖ್ಯ ಮಂತ್ರಿ ಬಸವರಾಜ ಬೊ ಮ್ಮಾಯಿ ಕಿವಿ ಮಾತು ಹೇಳಿದರು.
ರಾಜ್ಯದಲ್ಲಿ ಎಲ್ಲಾ ಪಾಲಿಟೆಕ್ನಿಕ್ ಗಳನ್ನು ಮೇಲ್ದರ್ಜೆಗೆ ಏರಿಸಲಾಗುವುದು. ವಿದ್ಯಾನಿಧಿ ಮೊತ್ತವನ್ನು ಏರಿಸಲು ಚಿಂತನೆ ಮಾಡಲಾಗುವುದು. ಸಿ.ಎಂ.ಮಾರ್ಗದರ್ಶಿ ಆ್ಯಪ್ ಮಾದರಿಯ ಯೋಜನೆ ಒಂದನ್ನು ಅಭಿವೃದ್ಧಿ ಪಡಿಸಲಾ ಗುವುದು ಎಂದು ಭರವಸೆ ನೀಡಿದರು.
ಈ ಸಂದರ್ಭ ಸಂಸದ ನಳಿನ್ ಕುಮಾರ್ ಕಟೀಲ್, ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ ಸಾರ್, ಕಂದಾಯ ಸಚಿವ ಆರ್.ಅಶೋಕ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಚಿವರಾದ ಸುನಿಲ್ ಕುಮಾರ್, ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಾಜೇಶ್ ನಾಯ್ಕ್, ಉಮಾನಾಥ ಕೊಟ್ಯಾನ್, ಡಾ.ಮಂಜುನಾಥ ಭಂಡಾರಿ, ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಪೋಲಿಸ್ ಆಯುಕ್ತ ಶಶಿಕುಮಾರ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ಮೂಡಬಿದ್ರೆ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್, ಮೀನುಗಾರಿಕಾ ನಿಗಮದ ಅಧ್ಯಕ್ಷ ನಿತಿನ್ ಕುಮಾರ್, ಅಲೆಮಾರಿ, ಅರೆ ಅಲೆಮಾರಿ ನಿಗಮದ ಅಧ್ಯಕ್ಷ ರವೀಂದ್ರ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.