ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ರವಿಶಂಕರ್ ಗೆಲುವು ನಿಶ್ಚಿತ: ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು: ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆ ಪ್ರಚಾರದಲ್ಲಿ ಉತ್ತಮ ಸ್ಪಂದನೆ ವ್ಯಕ್ತವಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರು ನೂರಕ್ಕೆ ನೂರರಷ್ಟು ಮೊದಲ ಪ್ರಾಶಸ್ತ್ಯ ಮತಗಳಿಂದ ಜಯಗಳಿಸಲಿದ್ದಾರೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ವಿಶ್ವಾಸ ವ್ಯಕ್ತಪಡಿಸಿದರು.
ನಗರದಲ್ಲಿ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಜೂ.8ಕ್ಕೆ ಮುಖ್ಯಮಂತ್ರಿಗಳು ಆಗಮಿಸಿ, ಪ್ರಚಾರ ಮಾಡಲಿದ್ದಾರೆ. 4 ಜಿಲ್ಲೆಗಳ ಎಲ್ಲಾ ಪ್ರಮುಖರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದರು.
ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಇನ್ನು ಜೆಡಿಎಸ್ ಅಭ್ಯರ್ಥಿಯನ್ನು ಯಾರೂ ಬೆಂಬಲಿಸುತ್ತಿಲ್ಲ. ಎಲ್ಲಾ ಪದವೀಧರರು, ಶಿಕ್ಷಕರು ಬಿಜೆಪಿಗೆ ಬೆಂಬಲ ಸೂಚಿಸುತ್ತಿದ್ದು ರವಿಶಂಕರ್ ಗೆಲುವು ನಿಶ್ಚಿತ ಎಂದರು.
ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರ ಸಂಬಂಧ ಇಂದು ಮುಖ್ಯಮಂತ್ರಿಗಳು ಸಂಬಂಧಪಟ್ಟವರೊಂದಿಗೆ ಸಭೆ ಮಾಡಲಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಭೆ ನಡೆಸಿ ಮುಂದೆ ಇದು ಆಗದಂತೆ ಕ್ರಮಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ಶಿಕ್ಷಣ ಸಚಿವರಾದ ನಾಗೇಶ್ ಅವರ ಮನೆ ಮೇಲೆ ದಾಳಿ ಮಾಡಿದ್ದರ ಸಂಬಂಧ ಪೊಲೀಸರು ಕ್ರಮಕೈಗೊಳ್ಳಲಿದ್ದಾರೆ. ಯೋಗ ದಿನಾಚರಣೆ ಕುರಿತು ಕೇಂದ್ರದ ಅಧಿಕಾರಿಗಳು ಭೇಟಿ ನೀಡಿದ್ದು ಈ ಸಂಬಂಧ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಜೂ.8ಕ್ಕೆ ಮುಖ್ಯಮಂತ್ರಿಗಳು ಆಗಮಿಸಿದ ನಂತರ ರೂಪುರೇಷೆ ಅಂತಿಮಗೊಳಿಸಲಾಗುವುದು ಎಂದರು.







