ವಿಧಾನಸಭೆ ಚುನಾವಣೆಗೆ ರಾಮನಗರದಿಂದ ಸ್ಪರ್ಧೆ ವಿಚಾರ: ನಿಖಿಲ್ ಕುಮಾರಸ್ವಾಮಿ ಹೇಳಿದ್ದೇನು?

ಬೆಂಗಳೂರು, ಜೂ.6: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಯಾವುದೇ ಚರ್ಚೆಯಾಗಿಲ್ಲ. ರಾಮನಗರದಿಂದ ನಾನು ಸ್ಪರ್ಧಿಸುವುದು ದೂರದ ಮಾತು. ನನಗೆ ಪಕ್ಷ ಜವಾಬ್ದಾರಿ ನೀಡಿದ್ದು, ಮೊದಲು ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ.
ಬಿಬಿಎಂಪಿ ಚುನಾವಣೆ ಹಿನ್ನೆಲೆಯಲ್ಲಿ ಇಂದು ಪಕ್ಷದ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಂಡಿದ್ದ ಬೆಂಗಳೂರು ಮಹಾನಗರ ಯುವ ಜೆಡಿಎಸ್ ಮುಖಂಡರ ಸಭೆಗೂ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು.
ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ವಿಭಜಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ಅವರು ಆತ್ಮಸಾಕ್ಷಿಯ ಮತಗಳ ಬಗ್ಗೆ ಮಾತನಾಡಿದ್ದಾರೆ. ನಮ್ಮ ಪಕ್ಷದಲ್ಲಿರುವ ಶಾಸಕರಿಗೂ ಆತ್ಮಸಾಕ್ಷಿ ಇದೆ. ನಮ್ಮ ಮತಗಳನ್ನು ಅಷ್ಟು ಸುಲಭವಾಗಿ ಕಾಂಗ್ರೆಸ್ ಒಡೆಯಲು ಸಾಧ್ಯವಿಲ್ಲ ಎಂದು ನೇರವಾಗಿ ಹೇಳುತ್ತೇನೆ ಎಂದು ಅವರು ಹೇಳಿದರು.
ಅಸಮಾಧಾನ ಎದ್ದು ಕಾಣುತ್ತಿರುವುದು ಕಾಂಗ್ರೆಸ್ ಪಕ್ಷದಲ್ಲಿ. ನಮ್ಮಲ್ಲಿ ಯಾವುದೇ ರೀತಿಯ ಅಸಮಾಧಾನ ಇಲ್ಲ. ಕೇವಲ ಒಬ್ಬರು, ಇಬ್ಬರು ಶಾಸಕರಲ್ಲಿ ಮಾತ್ರ ಅಸಮಾಧಾನ ಇತ್ತು. ಅವರ ಅಸಮಾಧಾನವನ್ನು ಸರಿಪಡಿಸಿದ್ದೇವೆ. ಹೀಗಾಗಿ ಎಲ್ಲ ಶಾಸಕರು ಒಗ್ಗಟ್ಟಾಗಿದ್ದಾರೆ. ಜೂ.10ರಂದು ಅದು ಸಾಬೀತಾಗುತ್ತದೆ ಎಂದು ನಿಖಿಲ್ ಕುಮಾರಸ್ವಾಮಿ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಜೆಡಿಎಸ್ ಚಿಹ್ನೆಯ ಮೇಲೆ ಗೆದ್ದಿದ್ದೇವೆಂದು ಐದಾರು ದಿನಗಳ ಹಿಂದಷ್ಟೇ ಮಾಧ್ಯಮಗಳ ಮುಂದೆ ಮಾಜಿ ಸಚಿವ ಜಿ.ಟಿ.ದೇವೇಗೌಡ ಅವರು ಹೇಳಿದ್ದಾರೆ. ಹಾಗಾಗಿ ಪಕ್ಷದ ಶಾಸಕರ ಮತಗಳು ಬೇರೆ ಕಡೆ ಹೋಗುವುದಿಲ್ಲ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದರು.
ಕುವೆಂಪು ಅವರಿಗೆ ಅವಮಾನ ಸರಿಯಲ್ಲ: ರಾಷ್ಟ್ರಕವಿ ಕುವೆಂಪು ಸಮಾಜದ ದೊಡ್ಡ ವ್ಯಕ್ತಿ. ಅವರಿಗೆ ಅವಮಾನ ಮಾಡಿರೋದನ್ನು ಖಂಡಿಸುತ್ತೇನೆ. ರಾಷ್ಟ್ರಕವಿ ಕುವೆಂಪು ಅವರು ಕರ್ನಾಟಕ ಮಾತ್ರವಲ್ಲ, ಇಡೀ ಜಗತ್ತು ಗೌರವಿಸುವಂತ ಮಹಾನ್ ಸಾಹಿತಿಗಳು. ನಮ್ಮ ನಾಡಿನ ಪ್ರಾತಃಸ್ಮರಣೀಯರು. ಅಂತಹವರ ಬಗ್ಗೆ ಲಘುವಾಗಿ ಮಾತನಾಡುವುದು ಹಾಗೂ ನಾಡಗೀತೆಗೆ ಅಪಮಾನ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.
ಈ ಸಂದರ್ಭದಲ್ಲಿ ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್.ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಮತ್ತಿತರರು ಉಪಸ್ಥಿತರಿದ್ದರು.







