ದೇಶ ಭಕ್ತಿ, ಧರ್ಮದ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸುತ್ತಿರುವವರಿಂದ ಜಿಲ್ಲೆಗೆ ಹಿನ್ನಡೆ: ಬಿ.ಕೆ. ಹರಿಪ್ರಸಾದ್
ಮುಸ್ಲಿಂ ಸೆಂಟ್ರಲ್ ಕಮಿಟಿಯಿಂದ ಆಭಿನಂದನಾ ಸಮಾರಂಭ

ಮಂಗಳೂರು: ದೇಶ ಭಕ್ತಿ, ಧರ್ಮದ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸುತ್ತಿರುವವರಿಂದ ಜಿಲ್ಲೆಯ ಅಭಿವೃದ್ಧಿಗೆ ಹಿನ್ನಡೆಯಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ನಗರದ ಶಾದಿ ಮಹಲ್ ನಲ್ಲಿಂದು ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕನಾಗಿ ಆಯ್ಕೆಗೊಂಡ (ಬಿ.ಕೆ.ಹರಿಪ್ರಸಾದ್) ಹಿನ್ನೆಲೆಯಲ್ಲಿ ಹಮ್ಮಿಕೊಂಡ ಅಭಿನಂದನಾ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.
ದೇಶದಲ್ಲಿ ಅಲ್ಪಸಂಖ್ಯಾತರು, ದಲಿತರ ಮೇಲೆ ನಡೆಯುತ್ತಿರುವ ದೌರ್ಜನ್ಯ ಸಂವಿಧಾನದ ಮೇಲೆ ನಡೆಯುತ್ತಿರುವ ದಾಳಿ ಎಂದು ಪರಿಗಣಿಸಬೇಕಾಗಿದೆ. ಇಂತಹ ಸಂದರ್ಭ ಸಂವಿಧಾನದ ಮೌಲ್ಯಗಳನ್ನು ಉಳಿಸಿಕೊಳ್ಳಲು ಈ ದೇಶದ ಜನರು ಒಂದಾಗಬೇಕು ಎಂದು ಹರಿಪ್ರಸಾದ್ ಕರೆ ನೀಡಿದರು.
ದಕ್ಷಿಣ ಕನ್ನಡ ಜಿಲ್ಲೆ ನನ್ನ ಹುಟ್ಟೂರು ಮತ್ತು ಬೆಳೆಸಿದ ಊರು. ಇದಿನಬ್ಬ, ಜನಾರ್ದನ ಪೂಜಾರಿ, ಆಸ್ಕರ್ ಫೆರ್ನಾಂಡಿಸ್, ವಡ್ಡರ್ಸೆ ರಘುರಾಮ ಶೆಟ್ಟಿಯವರಂತಹ ವ್ಯಕ್ತಿಗಳಿಂದ ನಾನು ಸಾಕಷ್ಟು ಕಲಿತಿದ್ದೇನೆ ಎಂದು ಹರಿಪ್ರಸಾದ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಮಾಜಿ ಶಾಸಕ ಕೆ.ಎಸ್.ಮುಹಮ್ಮದ್ ಮಸೂದ್ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾನಾಡುತ್ತಾ, ರಾಜ್ಯದಲ್ಲಿ ಅಲ್ಪಸಂಖ್ಯಾತರು, ಹಿಂದುಳಿದವರು, ಮಹಿಳೆಯರ ಹಕ್ಕುಗಳ ಮೇಲೆ ದಾಳಿ ನಡೆಯುತ್ತಿರುವ ಸಂದರ್ಭದಲ್ಲಿ ಅದರ ವಿರುದ್ಧ ಗಟ್ಟಿ ಧ್ವನಿ ಯಲ್ಲಿ ಮಾತನಾಡುತ್ತಿರುವ ಬಗ್ಗೆ ನಮಗೆ ಅಭಿಮಾನವಿದೆ. ಈ ದೇಶದಲ್ಲಿ ಹುಟ್ಟಿ ಬೆಳೆದ ಮುಸಲ್ಮಾನರನ್ನು ಪಾಕಿಸ್ತಾನ ಕ್ಕೆ ಹೋಗಿ ಎನ್ನುವವರು ಬೇಕಾದರೆ ಪಾಕಿಸ್ತಾನಕ್ಕೆ ಹೋಗಲಿ. ಮುಸಲ್ಮಾನರು ತಾಳ್ಮೆ ಕಳೆದು ಕೊಳ್ಳಬಾರದು ಎಂದ ಅವರು ಬಿ.ಕೆ.ಹರಿಪ್ರಸಾದ್ ರಂತಹ ನಾಯಕರಿಗೆ ಶುಭ ಹಾರೈಸುವುದಾಗಿ ತಿಳಿಸಿದ್ದಾರೆ.
ಸಮಾರಂಭದಲ್ಲಿ ದ.ಕ ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಶಾಸಕ ಯು.ಟಿ.ಖಾದರ್, ಮಾಜಿ ಶಾಸಕ ಮೊಯ್ದಿನ್ ಬಾವ, ಮಾಜಿ ಮೇಯರ್ ಶಶಿಧರ ಹೆಗ್ಡೆ, ಮನಪಾ ಸದಸ್ಯರಾದ ಅಬ್ದುಲ್ ರವೂಫ್, ಸಂಶುದ್ದೀನ್, ಝೀನತ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಮುಸ್ಲಿಂ ಸೆಂಟ್ರಲ್ ಕಮಿಟಿಯ ಉಪಾಧ್ಯಕ್ಷ ಸಿ.ಮುಹಮ್ಮದ್ ಹಾಜಿ, ಕೋಶಾಧಿಕಾರಿ ಮೂಸಾ ಮೊಹಿಯುದ್ದೀನ್, ಬೋಳಾರ ಶಾದಿಮಹಲ್ ಅಧ್ಯಕ್ಷ ಯೂಸುಫ್ ಖಾದರ್, ಗೇರು ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಬಿ.ಎಚ್. ಖಾದರ್, ಉಳ್ಳಾಲ ಸೈಯದ್ ಮದನಿ ದರ್ಗಾದ ಅಧ್ಯಕ್ಷ ರಶೀದ್ ಹಾಜಿ, ವಕ್ಫ್ ಬೋರ್ಡ್ ದ.ಕ ಜಿಲ್ಲಾಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿ ಸ್ಟಾರ್, ಮುಸ್ಲಿಂ ಸೆಂಟ್ರಲ್ ಕಮಿಟಿ ಯ ಪ್ರಧಾನ ಕಾರ್ಯದರ್ಶಿ ಹನೀಫ್ ಹಾಜಿ ಉಪಸ್ಥಿತರಿದ್ದರು.
ಉಪಾಧ್ಯಕ್ಷ ಇಬ್ರಾಹಿಂ ಕೋಡಿಜಾಲ್ ಸ್ವಾಗತಿಸಿದರು. ಮಾಜಿ ಮೇಯರ್ ಕೆ.ಅಶ್ರಫ್ ವಂದಿಸಿದರು. ರಝಾಕ್ ಇರಾ ಕಾರ್ಯಕ್ರಮ ನಿರೂಪಿಸಿದರು. ಮುಸ್ಲಿಂ ಸೆಂಟ್ರಲ್ ಕಮಿಟಿಯ ಪದಾಧಿಕಾರಿಗಳು ಈ ಸಂದರ್ಭ ಉಪಸ್ಥಿತರಿದ್ದರು.















