ನಾಳೆ ವಿ.ಪರಿಷತ್ ನಾಲ್ಕು ಕ್ಷೇತ್ರಗಳ ಮತ ಎಣಿಕೆ: ಮಧ್ಯಾಹ್ನದ ವೇಳೆ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು, ಜೂ. 14: ಎರಡು ಪದವೀಧರ ಹಾಗೂ ಎರಡು ಶಿಕ್ಷಕರ ಕ್ಷೇತ್ರಗಳಿಗೆ ಜೂ.13ರಂದು ನಡೆದಿದ್ದ ಚುನಾವಣೆಯ ಮತ ಎಣಿಕೆ ಕಾರ್ಯವು ಮೈಸೂರು ಮತ್ತು ಬೆಳಗಾವಿಯ ಕೇಂದ್ರಗಳಲ್ಲಿ ನಾಳೆ(ಜೂ.15) ಬೆಳಗ್ಗೆ 8ಗಂಟೆಯಿಂದಲೇ ಆರಂಭವಾಗಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.
ಆಡಳಿತಾರೂಢ ಬಿಜೆಪಿ, ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಜೆಡಿಎಸ್ ನಡುವೆ ತೀವ್ರ ಪ್ರತಿಷ್ಠೆ, ಪೈಪೋಟಿ ಸೃಷ್ಟಿಸಿರುವ ವಾಯವ್ಯ ಪದವೀಧರ ಮತ್ತು ವಾಯವ್ಯ ಶಿಕ್ಷಕರ ಹಾಗೂ ದಕ್ಷಿಣ ಪದವೀಧರ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರಗಳಲ್ಲಿ ಚುನಾವಣೆ ನಡೆಸಿದ್ದು, ಬಿಜೆಪಿಯ ಬಸವರಾಜ ಹೊರಟ್ಟಿ, ಕಾಂಗ್ರೆಸ್ ಪ್ರಕಾಶ್ ಹುಕ್ಕೇರಿ, ಮಧು ಮಾದೇಗೌಡ ಸೇರಿದಂತೆ ಒಟ್ಟು 49 ಮಂದಿ ಅಭ್ಯರ್ಥಿಗಳ ಭವಿಷ್ಯ ನಾಳಿನ ಮತ ಎಣಿಕೆಯಿಂದ ಬಹಿರಂಗವಾಗಲಿದೆ.
ವಾಯವ್ಯ ಪದವೀಧರ, ವಾಯವ್ಯ ಶಿಕ್ಷಕರ ಮತ್ತು ಪಶ್ಚಿಮ ಶಿಕ್ಷಕರ ಕ್ಷೇತ್ರದ ಮತ ಎಣಿಕೆ ಕಾರ್ಯವು ಬೆಳಗಾವಿಯ ಜ್ಯೋತಿ ಪಿಯು ಕಾಲೇಜಿನ ಮತ ಎಣಿಕೆ ಕೇಂದ್ರದಲ್ಲಿ ಹಾಗೂ ದಕ್ಷಿಣ ಪದವೀಧರ ಕ್ಷೇತ್ರದ ಮತ ಎಣಿಕೆ ಮೈಸೂರಿನ ಮಹಾರಾಣಿ ಮಹಿಳಾ ಕಾಲೇಜಿನಲ್ಲಿ ನಡೆಯಲಿದೆ. ಮತ ಎಣಿಕೆ ಕಾರ್ಯಕ್ಕೆ ಚುನಾವಣಾ ಆಯೋಗ ಅಗತ್ಯ ಸಿದ್ಧತೆ ಮಾಡಿಕೊಂಡಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ಅತ್ಯಂತ ಹೆಚ್ಚು ಮತದಾನ: ವಾಯವ್ಯ ಪದವೀಧರ ಕ್ಷೇತ್ರದಲ್ಲಿ ಶೇ.66.18, ದಕ್ಷಿಣ ಪದವೀಧರ ಕ್ಷೇತ್ರದಲ್ಲಿ ಶೇ.70.06, ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.84.30 ಹಾಗೂ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಶೇ.86.67ರಷ್ಟು ಸೇರಿದಂತೆ ನಾಲ್ಕು ಕ್ಷೇತ್ರಗಳಲ್ಲಿ ಒಟ್ಟಾರೆ ಶೇ.71.01ರಷ್ಟು ಮತದಾನವಾಗಿದ್ದು, ಫಲಿತಾಂಶದತ್ತ ಎಲ್ಲರ ಚಿತ್ತ ನೆಟ್ಟಿದೆ.







