ದ.ಕ. ಜಿಲ್ಲೆಯಲ್ಲಿ ವಿದೇಶಿ ಪ್ರಜೆಗಳ ಸಮೀಕ್ಷೆಗೆ ಸೂಚನೆ: ಗೃಹ ಸಚಿವ ಆರಗ ಜ್ಞಾನೇಂದ್ರ
"ಅಪರಾಧ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಳಕ್ಕೆ ಕ್ರಮ ವಹಿಸಲು ಸೂಚನೆ"

ಮಂಗಳೂರು : ದ.ಕ. ಮತ್ತು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆಯುವ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಶಿಕ್ಷೆಯ ಪ್ರಮಾಣ ತುಂಬಾ ಕಡಿಮೆ ಇದೆ. ಇದರ ಹೆಚ್ಚಳಕ್ಕೆ ಸೂಕ್ತ ಕ್ರಮ ವಹಿಸಲು ಸೂಚನೆ ನೀಡಲಾಗಿದೆ ಎಂದು ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.
ನಗರ ಪೊಲೀಸ್ ಕಮಿಷನರ್ ಕಚೇರಿಯ ಸಭಾಂಗಣದಲ್ಲಿ ಸೋಮವಾರ ಹಿರಿಯ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಪೊಲೀಸ್ ಮತ್ತು ನ್ಯಾಯಾಂಗ ಇಲಾಖೆಯು ಸಮನ್ವಯತೆಯಿಂದ ಕೆಲಸ ಮಾಡಿದರೆ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಗರಿಷ್ಠ ಪ್ರಮಾಣದಲ್ಲಿ ಶಿಕ್ಷೆ ಕೊಡಿಸಲು ಸಾಧ್ಯ. ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿವೆ. ಅದರೆ ಶಿಕ್ಷೆಯ ಪ್ರಮಾಣ ಕಡಿಮೆಯಾಗಿವೆ. ಇದಕ್ಕೆ ಕಾರಣ ಏನು ಮತ್ತು ಮುಂದೇನು ಮಾಡಬೇಕು ಎಂಬುದರ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿರುವೆ. ಸಕಾಲದಲ್ಲಿ ಕೆಲಸ ಮಾಡಲು ಪೊಲೀಸ್ ಸಿಬ್ಬಂದಿ ಮತ್ತು ಸರಕಾರಿ ಅಭಿಯೋಜಕರ ಹುದ್ದೆ ಖಾಲಿಯಿರುವುದು ಗಮನಕ್ಕೆ ಬಂದಿದೆ. ಈ ಹುದ್ದೆ ಭರ್ತಿ ಮಾಡಲು ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ಗೃಹ ಸಚಿವರ ಅರಗ ಜ್ಞಾನೇಂದ್ರ ತಿಳಿಸಿದರು.
ಜಿಲ್ಲೆಯ ಕಾನೂನು ಸುವ್ಯವಸ್ಥೆಯ ಬಗ್ಗೆ ತೃಪ್ತಿ ಪಡಿಸಿದ ಸಚಿವರು, ಪ್ರಕರಣಗಳಿಗೆ ಸಂಬಂಧಿಸಿದ ಶಿಕ್ಷೆಯ ಪ್ರಮಾಣದ ಬಗ್ಗೆ ಅತೃಪ್ತಿ ಪಡಿಸಿದರು. ಶಿಕ್ಷೆಯ ಪ್ರಮಾಣ ಕೇವಲ ಶೇ.೧೨-೧೩ರಷ್ಟು ಮಾತ್ರ ಇದೆ. ಶಿಕ್ಷೆಯ ಪ್ರಮಾಣ ಕಡಿಮೆಯಾಗಲು ನಾನಾ ಕಾರಣಗಳಿರಬಹುದು. ಆದಾಗ್ಯೂ ಶಿಕ್ಷೆಯ ಪ್ರಮಾಣ ಹೆಚ್ಚಿಸಲು ಪೊಲೀಸ್ ಮತ್ತು ನ್ಯಾಯಾಂಗ ಇಲಾಖೆಯು ಸಮನ್ವಯತೆ ಸಾಧಿಸಬೇಕಿದೆ ಎಂದರು.
ವಿದೇಶಿ ಪ್ರಜೆಗಳ ಸಮೀಕ್ಷೆಗೆ ಸೂಚನೆ: ಕರಾವಳಿ ತೀರದ ಈ ಜಿಲ್ಲೆಯಲ್ಲಿ ವಿದೇಶಿ ನುಸುಳುಕೋರರ ಉಪಟಳವಿರುವ ಸಾಧ್ಯತೆ ಇದೆ. ಹಾಗಾಗಿ ಮಂಗಳೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯ ಪ್ರತಿಯೊಂದು ಠಾಣಾ ವ್ಯಾಪ್ತಿಯಲ್ಲಿರುವ ವಿದೇಶಿ ಪ್ರಜೆಗಳ ಮಾಹಿತಿ ಕಲೆ ಹಾಕಲು ಪೊಲೀಸರಿಗೆ ಎರಡು ವಾರಗಳ ಕಾಲಾವಕಾಶ ನೀಡಲಾಗಿದೆ. ಯಾವ್ಯಾವ ದೇಶದ ಪ್ರಜೆಗಳಿದ್ದಾರೆ? ಯಾವ ಉದ್ದೇಶಕ್ಕಾಗಿ ಬಂದಿದ್ದಾರೆ ? ಅವಧಿ ಮೀರಿ ನೆಲೆಸಿದ್ದಾರೆಯೇ? ಎಂಬುದರ ಬಗ್ಗೆಯೂ ಮಾಹಿತಿ ಸಂಗ್ರಹಿಸಲು ಸೂಚಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳಿಗೆ ನಕಲಿ ಆಧಾರ್ ಕಾರ್ಡ್, ರೇಶನ್ ಕಾರ್ಡ್, ವೋಟರ್ ಐಡಿ ಇತ್ಯಾದಿಯನ್ನು ಮಾಡಿಕೊಡುವ ಜಾಲದ ಬಗ್ಗೆಯೂ ನಿಗಾವಹಿಸಲು ಸೂಚನೆ ನೀಡಲಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಶ್ಚಿಮ ವಲಯ ಐಜಿಪಿ ದೇವಜ್ಯೋತಿ ರಾಯ್, ನಗರ ಪೊಲೀಸ್ ಕಮಿಷನರ್ ಶಶಿಕುಮಾರ್, ಜಿಲ್ಲಾ ಎಸ್ಪಿ ಋಷಿಕೇಶ್ ಭಗವಾನ್ ಸೋಣಾವನೆ ಉಪಸ್ಥಿತರಿದ್ದರು.