ಹದಗೆಟ್ಟ ಬೆಂಗಳೂರು-ಮಂಗಳೂರು ಹೆದ್ದಾರಿ; ಹತ್ತು ದಿನದೊಳಗೆ ದುರಸ್ತಿ ಮಾಡಲು ಸೂಚನೆ

ಫೈಲ್ ಚಿತ್ರ
ಬೆಂಗಳೂರು, ಜೂ. 30: ‘ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಹಾಸನ-ಸಕಲೇಶಪುರ- ಅಡ್ಡಹೊಳೆ ವ್ಯಾಪ್ತಿಯಲ್ಲಿ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು, ದುರಸ್ತಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವ ಮೂಲಕ ವಾಹನಗಳ ಸುಗಮ ಸಂಚಾರಕ್ಕೆ ತ್ವರಿತಗತಿ ಅವಕಾಶ ಕಲ್ಪಿಸಬೇಕು' ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ವಿಕಾಸಸೌಧದಲ್ಲಿ ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಹಾಗೂ ಇಂಧನ ಸಚಿವ ಸುನಿಲ್ ಕುಮಾರ್ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದು, ಹೆದ್ದಾರಿ ಶಿಥಿಲಗೊಂಡಿದ್ದು, ಈ ರಸ್ತೆಯಲ್ಲಿ ವಾಹನ ಸಂಚಾರ ದುಸ್ತರವಾಗಿದೆ. ಹೀಗಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ' ಎಂದು ತಿಳಿಸಿದರು.
ಮೇಲ್ಕಂಡ ಹೆದ್ದಾರಿಯನ್ನು ಇನ್ನೆರಡು ದಿನಗಳ ಒಳಗಾಗಿ ಸಮರೋಪಾದಿಯಲ್ಲಿ ದುರಸ್ತಿ ಕಾಮಗಾರಿಯನ್ನು ಆರಂಭಿಸಬೇಕು. ಹತ್ತು ದಿನಗಳ ಒಳಗಾಗಿ ಈ ಹೆದ್ದಾರಿಯನ್ನು ಸುಸ್ಥಿತಿಗೆ ತರಬೇಕು. ಈ ಬಗ್ಗೆ ಅಧಿಕಾರಿಗಳು ಸೂಕ್ತ ಗಮನಹರಿಸಬೇಕು. ಜೊತೆಗೆ ಸಂಬಂಧಪಟ್ಟ ಗುತ್ತಿಗೆದಾರರೂ ಆ ನಿಟ್ಟಿನಲ್ಲಿ ಕಾರ್ಯ ಪ್ರವೃತ್ತರಾಗಬೇಕು ಎಂದು ಉಭಯ ಸಚಿವರು ನಿರ್ದೇಶನ ನೀಡಿದರು.
ಉಡುಪಿ, ಮಂಗಳೂರು ಸೇರಿದಂತೆ ಕರಾವಳಿ ಭಾಗಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯೂ ಇದಾಗಿದ್ದು, ಕೂಡಲೇ ದುರಸ್ತಿ ಕಾಮಗಾರಿ ಕೈಗೊಳ್ಳಲು ಆಸ್ಥೆ ವಹಿಸಬೇಕು. ಇಲ್ಲವಾದರೆ, ಕರಾವಳಿಗೆ ಸಾರಿಗೆ ಸಂಪರ್ಕ ಕಡಿತಗೊಂಡು ಆ ಭಾಗವು ದ್ವೀಪದಂತಾಗಿ ಜನರು ತೀವ್ರ ತೊಂದರೆ ಅನುಭವಿಸಬೇಕಾಗುತ್ತದೆ' ಎಂದು ಸಚಿವರು, ಅಧಿಕಾರಿಗಳಿಗೆ ಎಚ್ಚರಿಸಿದರು.
ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಬಿ.ಎಚ್.ಅನಿಲ್ ಕುಮಾರ್, ಕಾರ್ಯದರ್ಶಿ ಡಾ.ಕೆ.ಎಸ್.ಕೃಷ್ಣಾ ರೆಡ್ಡಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ಎಂ.ಕೆ.ವಾಠೋರೆ ಸೇರಿದಂತೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.







