ಉಡುಪಿ: ಎಸೆಸೆಲ್ಸಿ ಸಾಧಕ ವಿದ್ಯಾರ್ಥಿಗಳೊಂದಿಗೆ ಸಂವಾದ

ಉಡುಪಿ: ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣಾಂಕಗಳೊಂದಿಗೆ ಸಾಧನೆ ಮಾಡಿದ ಜಿಲ್ಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಶನಿವಾರ ಮಣಿಪಾಲದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಿತು.
ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯಲ್ಲಿ ಪೂರ್ಣಾಂಕಗಳೊಂದಿಗೆ (೬೨೫ರಲ್ಲಿ ೬೨೫) ಸಾಧನೆ ಮಾಡಿದ ವಿದ್ಯಾರ್ಥಿಗಳು ತಮ್ಮ ಈ ಸಾಧನೆಗೆ ತಾವು ಅನುಸರಿಸಿದ ಕಲಿಕಾ ವಿಧಾನಗಳು ಮತ್ತು ಶಾಲಾ ಶಿಕ್ಷಕರು, ಪೋಷಕರು ನೀಡಿದ ಸಹಕಾರದ ಬಗ್ಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಎಸೆಸೆಲ್ಸಿ ಕಲಿಯುತ್ತಿರುವ ವಿವಿಧ ಶಾಲೆ ಮತ್ತು ಹಾಸ್ಟೆಲ್ಗಳ ವಿದ್ಯಾರ್ಥಿಗಳು ತಾವೂ ಕೂಡಾ ಪರೀಕ್ಷೆಯಲ್ಲಿ ಗರಿಷ್ಠ ಅಂಕಗಳನ್ನು ಪಡೆಯಲು ಅನುಸರಿಸಬೇಕಾದ ಕಲಿಕಾ ವಿಧಾನಗಳ ಬಗ್ಗೆ ಸಾಧಕ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ, ಅಗತ್ಯ ಮಾಹಿತಿಯನ್ನು ಪಡೆದರು. ಸಂಪನ್ಮೂಲ ವ್ಯಕ್ತಿ ನರೇಂದ್ರ ಕುಮಾರ್ ಕೋಟ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಕುರಿತು ಉಪನ್ಯಾಸ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಡಿಡಿಪಿಐ ಗೋವಿಂದ ಮಡಿವಾಳ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್ ಕಾಮತ್, ಜಾಹ್ನವಿ, ಐಟಿಡಿಪಿ ಇಲಾಖೆ ಯೋಜನಾ ಸಮನ್ವಯಾಧಿಕಾರಿ ದೂದ್ಪೀರ್, ಜಿಲ್ಲೆಯ ವಿವಿಧ ಶಾಲೆ ಮತ್ತು ಹಾಸ್ಟೆಲ್ಗಳ ಎಸೆಸೆಲ್ಸಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು ಸ್ವಾಗತಿಸಿದರು. ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿ ಸಚಿನ್ ಕುಮಾರ್ ವಂದಿಸಿದರು.