ಮಳಲಿ ಮಸೀದಿ ಪ್ರಕರಣ: ಮಸೀದಿ ಆಡಳಿತ ಮಂಡಳಿಯ ದಾವೆ ಪ್ರಶ್ನಿಸಿದ್ದ ಅರ್ಜಿ ಹೈಕೋರ್ಟ್ ನಲ್ಲಿ ವಜಾ

ಮಂಗಳೂರು, ಜು.15: ದಕ್ಷಿಣ ಕನ್ನಡ ಜಿಲ್ಲೆಯ ಮಳಲಿ ಮಸೀದಿ ನವೀಕರಣವನ್ನು ತಡೆದ ವಿವಾದದ ಕುರಿತ ಮೂಲ ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸುತ್ತಿರುವ ಮಂಗಳೂರಿನ ಸಿವಿಲ್ ನ್ಯಾಯಾಲಯದ ಕ್ರಮ ಪ್ರಶ್ನಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಶುಕ್ರವಾರ ವಜಾ ಮಾಡಿದೆ.
ಮಂಗಳೂರಿನ ಧನಂಜಯ್ ಹಾಗೂ ಮನೋಜ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ಜೂನ್ 24ರಂದು ನಡೆಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಸಚಿನ್ ಶಂಕರ್ ಅವರ ಪೀಠವು ಅರ್ಜಿಯನ್ನು ವಜಾ ಮಾಡಿತು.
ಅರ್ಜಿದಾರರ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ, “ಮಸೀದಿಯ ಒಳಗೆ ದೇವಾಲಯವಿತ್ತೋ, ಇಲ್ಲವೋ ಎಂಬ ಕುರಿತ ಸಾಕ್ಷ್ಯಾಧಾರಗಳನ್ನು ಸ್ಥಳ ಕ್ಕೆ ಹೋಗಿ ಪರಿಶೀಲಿಸಿ ಸಂಗ್ರಹಿಸಬೇಕಿದೆ. ಈ ಕೆಲಸವನ್ನು ಬೇರೆಯವರು ಮಾಡಲು ಸಾಧ್ಯವಿಲ್ಲ. ವೈಜ್ಞಾನಿಕ ಗಿ ತಂತ್ರಜ್ಞಾನದ ಮೂಲಕ ಮಾತ್ರ ಇದು ಸಾಧ್ಯವಾಗಲಿದೆ. ಆದ್ದರಿಂದ, ಮಳಲಿ ಮಸೀದಿಯ ಪರಿಶೀಲನೆಗಾಗಿ ಆಯುಕ್ತರನ್ನು ನೇಮಕ ಮಾಡುವ ಅಗತ್ಯವಿದೆ” ಎಂದು ವಾದಿಸಿದ್ದರು.
ಮಸೀದಿಯ ಅಧ್ಯಕ್ಷರ ಪರ ವಾದಿಸಿದ್ದ ಹಿರಿಯ ವಕೀಲ ಜಯಕುಮಾರ್ ಪಾಟೀಲ್ ಅವರು, “ಮೂಲ ದಾವೆಯನ್ನು ಆಲಿಸಲು ವಿಚಾರಣಾಧೀನ ನ್ಯಾಯಾಲಯದ ಅಧಿಕಾರ ವ್ಯಾಪ್ತಿ ನಿರ್ಧಾರವಾಗುವ ಮೊದಲು ಆಯುಕ್ತರ ವರದಿ ಅಗತ್ಯವಿಲ್ಲ. ಒಂದು ವೇಳೆ, ಮೊದಲು ಆಯುಕ್ತರನ್ನು ನೇಮಿಸಿ, ವರದಿ ಬಂದ ನಂತರ ದಾವೆಯ ಸಿಂಧುತ್ವದ ಬಗ್ಗೆ ವಿಚಾರಣೆ ನಡೆದು ವ್ಯತಿರಿಕ್ತ ತೀರ್ಪು ಬಂದರೆ, ಕಮಿಷನರ್ ನೇಮಕ ಮತ್ತವರ ವರದಿ ಎರಡಕ್ಕೂ ಮಾನ್ಯತೆ ಇರುವುದಿಲ್ಲ. ಆದ್ದರಿಂದ, ಮೊದಲು ಮೂಲ ದಾವೆಯ ಸಿಂಧುತ್ವ ನಿರ್ಧಾರವಾಗಬೇಕು” ಎಂದು ವಾದಿಸಿದ್ದರು.
ಹಿನ್ನೆಲೆ: ಮಳಲಿ ಮಸೀದಿ ನವೀಕರಣ ಕಾಮಗಾರಿಯ ವೇಳೆ ಅಲ್ಲಿ ದೇವಾಲಯ ಮಾದರಿ ರಚನೆ ಪತ್ತೆಯಾಗಿದೆ ಎಂದು ಸಂಘ ಪರಿವಾರ ಆರೋಪ ಮಾಡಿದ್ದು, ನವೀಕರಣ ಕಾಮಗಾರಿಗೆ ನಿರ್ಬಂಧ ವಿಧಿಸಲು ಕೋರಿ ಧನಂಜಯ್ ಹಾಗೂ ಮನೋಜ್ ಕುಮಾರ್ ಮಂಗಳೂರಿನ ಸಿವಿಲ್ ನ್ಯಾಯಾಲಯದಲ್ಲಿ ದಾವೆ ಹೂಡಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯವು ರಚನೆ ತೆರವುಗೊಳಿಸದಂತೆ ಪ್ರತಿಬಂಧಕಾಜ್ಞೆ ಹೊರಡಿಸಿತ್ತು.
ಈ ಮಧ್ಯೆ, ಮಸೀದಿಯ ಆಡಳಿತ ಮಂಡಳಿ ಮಧ್ಯಂತರ ಅರ್ಜಿ ಸಲ್ಲಿಸಿ, ವಿವಾದಿತ ಸ್ಥಳ ವಕ್ಫ್ ಆಸ್ತಿಯಾಗಿದೆ. ಜತೆಗೆ, ಸಾರ್ವಜನಿಕ ಪೂಜಾ ಸ್ಥಳ ಕಾಯಿದೆ ಅಡಿಯಲ್ಲಿ ದಾವೆಯು ಮಾನ್ಯತೆ ಹೊಂದಿಲ್ಲ ಎಂದು ವಾದಿಸಿತ್ತು. ಮತ್ತೊಂದೆಡೆ, ಮೂಲ ದಾವೆದಾರರೂ ಮಧ್ಯಂತರ ಅರ್ಜಿ ಸಲ್ಲಿಸಿ, ಮೊದಲು ಕಮಿಷನರ್ ಒಬ್ಬರನ್ನು ನೇಮಕ ಮಾಡಿ ಪರಿಶೀಲನೆ ಮಾಡಿಸುವಂತೆ ಕೋರಿದ್ದರು. ಆದರೆ, ಸಿವಿಲ್ ನ್ಯಾಯಾಲಯ ಮೊದಲು ದಾವೆಯ ಸಿಂಧುತ್ವದ ಕುರಿತು ವಿಚಾರಣೆ ನಡೆಸಲು ನಿರ್ಧರಿಸಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಲಾಗಿತ್ತು.
ಮೂಲ ದಾವೆಯ ಸಿಂಧುತ್ವದ ಕುರಿತು ವಾದ-ಪ್ರತಿವಾದ ಆಲಿಸಿದರೂ, ಯಾವುದೇ ಆದೇಶ ಹೊರಡಿಸಬಾರದು ಎಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ನ್ಯಾಯಾಲಯಕ್ಕೆ ಹೈಕೋರ್ಟ್ ಜೂನ್ 13ರಂದು ಮಧ್ಯಂತರ ಆದೇಶ ಮಾಡಿತ್ತು.