'ಸ್ವಚ್ಛವಾಹಿನಿ ಸಾರಥಿ' ನಫೀಸಾ ಪೆರುವಾಯಿಗೆ ಮುಖ್ಯಮಂತ್ರಿ ಬೊಮ್ಮಾಯಿಯಿಂದ ಸನ್ಮಾನ

ಬಂಟ್ವಾಳ, ಜು.15: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ವತಿಯಿಂದ ಬೆಂಗಳೂರು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಗುರುವಾರ ಆಯೋಜಿಸಿದ ವಿಶ್ವ ಯುವ ಕೌಶಲ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಪೆರುವಾಯಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ, ಸ್ವಚ್ಛ ವಾಹಿನಿ ವಾಹನದಲ್ಲಿ ಚಾಲಕಿಯಾಗಿ ಸೇವೆ ಸಲ್ಲಿಸಿದ ನಫೀಸಾ ಅವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ರಾಜ್ಯದ ಐವರು ಸ್ವಚ್ಛವಾಹಿನಿ ಸಾರಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತನ್ನ ಭಾಷಣದಲ್ಲಿ ನಫೀಸಾ ಅವರ ಸೇವೆಯ ಬಗ್ಗೆ ಪ್ರಶಂಸೆಯ ನುಡಿಗಳನ್ನಾಡಿದರು.
ನಫೀಸಾ ಅವರು ಪೆರುವಾಯಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿದ್ದು, ಗ್ರಾಮದಲ್ಲಿ ತ್ಯಾಜ್ಯ ಸಂಗ್ರಹಿಸುವ ವಾಹನದ ಚಾಲಕಿ ಅನಾರೋಗ್ಯದಿಂದ ಇದ್ದಾಗ ಗ್ರಾಮದಲ್ಲಿ ತ್ಯಾಜ್ಯ ಸಂಗ್ರಹ ನಿಂತಿತ್ತು. ಈ ಸಂದರ್ಭದಲ್ಲಿ ತ್ಯಾಜ್ಯದ ವಾಹನವನ್ನು ನಫೀಸಾ ಅವರೇ ಸ್ವತಃ ಚಲಾಯಿಸಿ ತ್ಯಾಜ್ಯ ಸಂಗ್ರಹಿಸುವ ಮೂಲಕ ಗ್ರಾಮಸ್ಥರ ಪ್ರಶಂಸೆಗೆ ಪಾತ್ರರಾಗಿದ್ದರು.
ಕಾರ್ಯಕ್ರಮದಲ್ಲಿ ಸಂಜೀವಿನಿ ಯೋಜನೆಯಡಿ ತರಬೇತಿ ಪಡೆದವರನ್ನು ವೇದಿಕೆ ಮೇಲೆ ಕರೆಸಿಕೊಂಡು ಮುಖ್ಯಮಂತ್ರಿ ಮಾತನಾಡುವ ವೇಳೆ, ಗುಂಪಿನಲ್ಲಿದ್ದ ಮಹಿಳೆಯೊಬ್ಬರು ಸಿಎಂ ಜೊತೆ ಸೆಲ್ಫಿ ತೆಗೆದುಕೊಂಡರು. ತಮ್ಮೊಂದಿಗೆ ಸೆಲ್ಫಿ ತೆಗೆದುಕೊಂಡ ಮಹಿಳೆ ಪೆರುವಾಯಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಎಂದು ಮುಖ್ಯಮಂತ್ರಿ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.
ಕೌಶಲ್ಯ ಅಭಿವೃದ್ಧಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವಥ್ ನಾರಾಯಣ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.








