ಉಡುಪಿ ಜಿಲ್ಲೆಯ ಐದೂ ಸ್ಥಾನ ಗೆಲ್ಲುವ ಗುರಿಯೊಂದಿಗೆ ಪಕ್ಷ ಸಂಘಟನೆ: ಸುರೇಶ್ ನಾಯಕ್

ಉಡುಪಿ, ಜು.18: ಮುಂಬರಲಿರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದು, ಉಡುಪಿ ಜಿಲ್ಲೆಯ ಐದೂ ಸ್ಥಾನಗಳನ್ನು ಮತ್ತೆ ಗೆಲುವ ಗುರಿಯೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದ್ದಾರೆ.
ಕಡಿಯಾಳಿಯ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬಿಜೆಪಿ ಎಲ್ಲಾ ಚುನಾವಣೆ ಗಳನ್ನು ಸಂಘಟನಾ ಸಾಮರ್ಥ್ಯದಿಂದ ಗೆಲ್ಲುತ್ತಾ ಬಂದಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ 1,111 ಬೂತ್‌ಗಳಲ್ಲಿ ಬೂತ್ ಸಶಸ್ತೀಕರಣ, ಶಕ್ತಿ ಕೇಂದ್ರ ಪ್ರಮುಖರ ಸಭೆ ಹಾಗೂ ಮನೆ ಮನೆ ಬೇಟಿ ಅಭಿಯಾನ ನಡೆಯಲಿದೆ. ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿ ಸಂಘಟಿತ ಪ್ರಯತ್ನದ ಮೂಲಕ ಎಲ್ಲಾ ಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ವಿಜಯ ದಾಖಲಿಸಲು ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ ಶೆಟ್ಟಿ ಮಾತನಾಡಿದರು. ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರು, ರಾಜ್ಯ ಮೋರ್ಚಾಗಳ ಪದಾಧಿಕಾರಿಗಳು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ಮನೋಹರ ಎಸ್. ಕಲ್ಮಾಡಿ ವಂದಿಸಿದರು.







