ಬೆಂಗಳೂರು: GST ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಜು.19: ಮಂಡಕ್ಕಿ ಸೇರಿದಂತೆ ಆಹಾರ ಪದಾರ್ಥಗಳಿಗೆ ಕೇಂದ್ರ ಸರಕಾರ ಜಿಎಸ್ಟಿ ವಿಧಿಸಿರುವ ಕ್ರಮ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಮಂಗಳವಾರ ನಗರದ ರೇಸ್‍ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನ ಮುಂಭಾಗ ಬೆಂಗಳೂರು ಕಾಂಗ್ರೆಸ್ ಪ್ರಚಾರ ಸಮಿತಿ ನೇತೃತ್ವದಲ್ಲಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮಂಡಕ್ಕಿಯನ್ನು ಮುಂದಿಟ್ಟು ವಿಭಿನ್ನವಾಗಿ ಪ್ರತಿಭಟನೆ ನಡೆಸಿ, ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರ ಬಿಜೆಪಿ ಸರಕಾರ ದಿನನಿತ್ಯ ಒಂದಲ್ಲ ಒಂದು ರೀತಿಯಲ್ಲಿ ಅಗತ್ಯ ವಸ್ತುಗಳ ಮೇಲೆ ತೆರಿಗೆ ವಿಧಿಸುತ್ತಿದೆ. ಈಗ ಕುಡಿಯುವ ಹಾಲು, ಮೊಸರು, ಮಜ್ಜಿಗೆ, ಮಂಡಕ್ಕಿಗೂ ಜಿಎಸ್ಟಿ ವಿಧಿಸಿ ಜನರ ಜೀವನಕ್ಕೆ ವಿಷ ಹಾಕುತ್ತಿದೆ ಎಂದು ಕಾಂಗ್ರೆಸ್ ನಾಯಕರು ವಾಗ್ದಾಳಿ ನಡೆಸಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್, ಕಾಂಗ್ರಸ್ ನಾಯಕರಾದ ಎ.ಆನಂದ್, ರವಿಶೇಖರ್, ಆದಿತ್ಯ, ಪ್ರಕಾಶ್, ನವೀನ್, ಮಂಜುನಾಥ್ ಸೇರಿದಂತೆ ಪ್ರಮುಖರಿದ್ದರು.





