ಸಿಎಂ ಬೊಮ್ಮಾಯಿ ದಿಲ್ಲಿ ಪ್ರವಾಸ: ಸಂಪುಟ ವಿಸ್ತರಣೆ ಕುರಿತು ವರಿಷ್ಠರ ಜೊತೆ ಚರ್ಚೆ ಸಾಧ್ಯತೆ

ಬೆಂಗಳೂರು, ಜು. 24: ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೊಸದಿಲ್ಲಿಗೆ ಪ್ರಯಾಣ ಬೆಳೆಸಿದ್ದು, ಹಲವು ದಿನಗಳಿಂದ ನೆನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ವಿಸ್ತರಣೆ ಹಾಗೂ ನಿಗಮ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ನೇಮಕ ಸಂಬಂಧ ಪಕ್ಷದ ವರಿಷ್ಠರೊಂದಿಗೆ ಸಮಾಲೋಚನೆ ನಡೆಸುವ ಸಾಧ್ಯತೆಗಳಿವೆ.
ನಾಳೆ(ಜು.25) ನೂತನ ರಾಷ್ಟ್ರಪತಿ ಪ್ರಮಾಣವಚನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೊಸದಿಲ್ಲಿಗೆ ತೆರಳಿದ್ದಾರೆ. ಆ ಹಿನ್ನೆಲೆಯಲ್ಲಿ ಬೊಮ್ಮಾಯಿ ಅವರು ಮೂರು ದಿನಗಳ ದಿಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಈ ವೇಳೆ ಪಕ್ಷದ ವರಿಷ್ಠ ನಾಯಕರನ್ನು ಭೇಟಿ ಮಾಡಲಿರುವುದು ಸಚಿವ ಸ್ಥಾನದ ಆಕಾಂಕ್ಷಿಗಳನ್ನು ತುದಿಗಾಲ ಮೇಲೆ ನಿಲ್ಲಿಸಿದೆ.
ರವಿವಾರ ಬೆಳಗ್ಗೆಯೇ ವಿಶೇಷ ವಿಮಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಿಲ್ಲಿಗೆ ಪ್ರಯಾಣ ಬೆಳೆಸಿದ್ದು, ಮಧ್ಯಾಹ್ನದಿಂದ ರಾತ್ರಿಯವರೆಗೂ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ಸಭೆ ನಿಗದಿಯಾಗಿದ್ದು, ಆ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಪಾಲ್ಗೊಳ್ಳಲಿದ್ದು, ರಾತ್ರಿ ಕರ್ನಾಟಕ ಭವನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.
ನಾಳೆ(ಜು.25) ಬೆಳಗ್ಗೆ ನೂತನ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಸ್ವೀಕರಿಸಲಿದ್ದು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಭಾಗಿಯಾಗಲಿದ್ದು, ನಾಳೆ ಸಂಜೆ ಕೇಂದ್ರದ ಸಚಿವರನ್ನು ಭೇಟಿ ಮಾಡುವ ಕಾರ್ಯಕ್ರಮಗಳು ನಿಗದಿಯಾಗಿದ್ದು, ರಾಜ್ಯದ ಯೋಜನೆಗಳ ಕುರಿತು ಮಾತುಕತೆ ನಡೆಸಲಿದ್ದಾರೆ ಎಂದು ಗೊತ್ತಾಗಿದೆ.
ಜು.26ರ ಬೆಳಗ್ಗೆ ದಿಲ್ಲಿಯಿಂದ ಹಿಂದಿರುಗಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ದಿಲ್ಲಿಯ ವರಿಷ್ಠರಿಂದ ಯಾವ ಸುದ್ದಿಯನ್ನು ಹೊತ್ತು ತರಲಿದ್ದಾರೆಂಬುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಸಿಎಂ ಹೈಕಮಾಂಡ್ ಭೇಟಿ ಸಾಧ್ಯತೆ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಮತ್ತೆ ಆಸೆ ಚಿಗುರೊಡೆದಿದೆ.







