ಕುತೂಹಲ ಮೂಡಿಸಿದ ಜಿ.ಟಿ.ದೇವೇಗೌಡ- ಶಾಸಕ ಸಾ.ರಾ.ಮಹೇಶ್ ಭೇಟಿ

ಮೈಸೂರು,ಜು.25: ಮಹತ್ವದ ರಾಜಕೀಯ ಬೆಳವಣಿಗೆಯೊಂದರಲ್ಲಿ ಶಾಸಕ ಸಾ.ರಾ.ಮಹೇಶ್ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.
ನಗರದ ಜಲದರ್ಶಿನಿ ಅತಿಥಿಗೃಹದಲ್ಲಿ ರವಿವಾರ ಭೇಟಿ ಮಾಡಿ ಸುಮಾರು ಎರಡು ಗಂಟೆ ಗೌಪ್ಯವಾಗಿ ಮಾತುಕತೆ ನಡೆಸಿರುವುದು ಕುತೂಹಲ ಮೂಡಿಸಿದೆ.
ಕೆ.ಆರ್.ನಗರದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಹಿನ್ನಲೆಯಲ್ಲಿ ಸಮುದಾಯದ ನಾಯಕರನ್ನು ಒಟ್ಟಿಗೆ ಸೇರಿಸಬೇಕು ಎಂಬ ಉದ್ದೇಶದಿಂದ ಜಿ.ಟಿ.ದೇವೇಗೌಡರನ್ನು ಭೇಟಿಯಾಗಿ ಅಹ್ವಾನಿಸಿರುವುದಾಗಿ ಶಾಸಕ ಸಾ.ರಾ.ಮಹೇಶ್ ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯೊಂದಿಗೆ ಬಹಿರಂಗವಾಗಿ ವಾಗ್ವಾದಕ್ಕಿಳಿದಿದ್ದ ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್ ಪಕ್ಷದೊಂದಿಗೆ ಅಂತರ ಕಾಯ್ದುಕೊಂಡಿದ್ದರು. ಜೊತೆಗೆ ಮೈಸೂರು ಜಿಲ್ಲೆಯಲ್ಲಿ ಶಾಸಕ ಸಾ.ರಾ.ಮಹೇಶ್ ನಿಂದಲೇ ಕುಮಾರಸ್ವಾಮಿ ನಮ್ಮನ್ನೆಲ್ಲಾ ಕಡೆಗಣಿಸುತ್ತಿದ್ದಾರೆ ಎಂದು ಬಹಿರಂಗವಾಗಿಯೇ ಅಸಮಧಾನ ವ್ಯಕ್ತಪಡಿಸಿದ್ದರು.
ಇಷ್ಟೆಲ್ಲಾ ಬೆಳವಣಿಗೆಯ ನಡುವೆ ಶಾಸಕ ಸಾ.ರಾ.ಮಹೇಶ್ ರವಿವಾರ ಶಾಸಕ ಜಿ.ಟಿ.ದೇವೇಗೌಡರನ್ನು ಭೇಟಿಯಾಗಿ ಕೆಂಪೇಗೌಡ ಜಯಂತಿಗೆ ಆಹ್ವಾನಿಸಿದ್ದಲ್ಲದೆ ತಮ್ಮ ಬೆಂಬಲಿಗರೆನ್ನೆಲ್ಲಾ ಹೊರಗೆ ಕಳುಹಿಸಿ ಸುಮಾರು ಎರಡು ಗಂಟೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಶಾಸಕ ಜಿ.ಟಿ.ದೇವೇಗೌಡರ ಬಯಕೆಯಂತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜಿ.ಟಿ.ದೇವೇಗೌಡರಿಗೆ ಹಾಗೂ ಅವರ ಪುತ್ರ ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ.ಹರೀಶ್ ಗೌಡ ಅವರಿಗೆ ಹುಣಸೂರು ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಕೊಡಿಸುವ ಭರವಸೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.







