ಕನ್ನಡ ಕಡ್ಡಾಯ: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಹೈಕೋರ್ಟ್ ಆದೇಶ

ಬೆಂಗಳೂರು, ಜು.25: ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ಪ್ರಕರಣದಲ್ಲಿ ಪ್ರತಿವಾದಿಯನ್ನಾಗಿ ಮಾಡುವಂತೆ ಕೋರಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಕರ್ನಾಟಕ ಹೈಕೋರ್ಟ್‍ಗೆ ಮಧ್ಯಂತರ ಅರ್ಜಿ ಸಲ್ಲಿಸಿದೆ.
ಪದವಿ ಕಾಲೇಜುಗಳಲ್ಲಿ ಕನ್ನಡ ಭಾಷೆ ಕಲಿಕೆ ಕಡ್ಡಾಯ ಮಾಡಿರುವ ರಾಜ್ಯ ಸರಕಾರದ ಆದೇಶ ಪ್ರಶ್ನಿಸಿ, ‘ಸಂಸ್ಕೃತ ಭಾರತಿ ಟ್ರಸ್ಟ್’, ‘ಹಯಗ್ರೀವ ಟ್ರಸ್ಟ್’, ‘ವ್ಯೋಮಾ ಲಿಂಗ್ವಿಸ್ಟಿಕ್ ಲ್ಯಾಬ್ ಫೌಂಡೇಷನ್’ ಹಾಗೂ ‘ಸಂಸ್ಕೃತ ಪ್ರಾಧ್ಯಾಪಕ ಸಂಘ’ಗಳು ಸಲ್ಲಿಸಿರುವ ಪಿಐಎಲ್ ಮನವಿ ಮತ್ತು ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಂಡಿರುವ ಭಾಷೆಯನ್ನು ಮುಂದುವರಿಸಲು ಸ್ವತಂತ್ರರು ಎಂದು ಆದೇಶ ಮಾಡಬೇಕೆಂದು ಕೋರಿ ಕೆ.ಜಿ.ಶಿವಕುಮಾರ್ ಸೇರಿ 6 ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಪರ ವಕೀಲರು ಮಧ್ಯಂತರ ಅರ್ಜಿ ಸಲ್ಲಿಸಿದ್ದ ವಿಚಾರವನ್ನು ಪೀಠದ ಗಮನಕ್ಕೆ ತಂದರು. ಈ ಹಿನ್ನೆಲೆಯಲ್ಲಿ ನ್ಯಾಯಪೀಠವು ಪ್ರಾಧಿಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಆದೇಶ ಹೊರಡಿಸಿದೆ.





