ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣ: ಆದೇಶ ಪಾಲನೆ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆ

ಬೆಂಗಳೂರು, ಜು.27: ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಹಾಗೂ ಗುರು ಸಾರ್ವಭೌಮ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಲಿಮಿಟೆಡ್‍ನ ಠೇವಣಿದಾರರ ಹಣ ದುರ್ಬಳಕೆ ಹಾಗೂ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಇದುವರೆಗೆ ನೀಡಿರುವ ಆದೇಶಗಳ ಪಾಲನೆ ಕುರಿತ ವರದಿ ಸಲ್ಲಿಸುವಂತೆ ಅರ್ಜಿದಾರರಿಗೆ ಹೈಕೋರ್ಟ್ ಸೂಚನೆ ನೀಡಿದೆ.
ಪ್ರಕರಣದ ತನಿಖೆಗೆ ಎಸ್‍ಐಟಿ ರಚಿಸುವಂತೆ ಕೋರಿ ಕೆ.ಆರ್.ನರಸಿಂಹಮೂರ್ತಿ ಮತ್ತಿತರರು ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿತು.
ಅರ್ಜಿದಾರರ ಪರ ವಾದಿಸಿದ ವಕೀಲರು, ಗುರು ರಾಘವೇಂದ್ರ ಬ್ಯಾಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಪೀಠವು ಹಲವು ಆದೇಶಗಳನ್ನು ನೀಡಿದೆ. ಈ ಆದೇಶಗಳ ಪಾಲನೆ ಕುರಿತ ವರದಿ ಸಲ್ಲಿಸಲು ಎರಡು ವಾರ ಕಾಲಾವಕಾಶ ನೀಡಬೇಕೆಂದು ಪೀಠಕ್ಕೆ ಮನವಿ ಮಾಡಿದರು. ಅದನ್ನು ಪರಿಗಣಿಸಿದ ನ್ಯಾಯಪೀಠ, ಕಾಲಾವಕಾಶ ನೀಡಿ ವಿಚಾರಣೆಯನ್ನು ಮುಂದೂಡಿತು.
Next Story





