ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣ; ಇಬ್ಬರ ಸೆರೆ, ಶೀಘ್ರದಲ್ಲೇ ಉಳಿದವರ ಬಂಧನ: ಸಿಎಂ ಬೊಮ್ಮಾಯಿ

ಮಂಗಳೂರು, ಜು.28; ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರ ಬಂಧನವಾಗಿದೆ. ಶೀಘ್ರದಲ್ಲೇ ಉಳಿದವರ ಬಂಧನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಅವರು ಇಂದು ಪ್ರವೀಣ್ ನೆಟ್ಟಾರ್ ಹತ್ಯೆಯ ಹಿನ್ನೆಲೆಯಲ್ಲಿ ಸುಳ್ಯಕ್ಕೆ ಭೇಟಿ ನೀಡಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಯುತ್ತಿದೆ. ಪೊಲೀಸರಿಗೆ ತನಿಖೆಗೆ ಮುಕ್ತ ಅವಕಾಶ ನೀಡಲಾಗಿದೆ. ಸಂತ್ರಸ್ತರ ಮನೆಗೆ ಭೇಟಿ ನೀಡಿದ ಬಳಿಕ ಪರಿಹಾರದ ಘೋಷಣೆ ಮಾಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಗೃಹ ಸಚಿವರಾದ ಆರಗ ಜ್ಞಾನೇಂದ್ರ, ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಸುನೀಲ್ ಕುಮಾರ್, ಕೋಟಾ ಶ್ರೀನಿವಾಸ್ ಪೂಜಾರಿ, ಸಂಸದರಾದ ನಳೀನ್ ಕುಮಾರ್ ಕಟೀಲ್, ಸಿ.ಟಿ ರವಿ, ಶಾಸಕರಾದ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಮೇಯರ್ ಪ್ರೇಮಾನಂದ ಶೆಟ್ಟಿ, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಡಾ.ಕುಮಾರ್, ಪೊಲೀಸ್ ಆಯುಕ್ತ ಶಶಿ ಕುಮಾರ್ ಹಾಗೂ ಇತರ ಜನ ಪ್ರತಿನಿಧಿಗಳು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು.