ಬಿಡಿಎ ಅಕ್ರಮ: ಕೆಎಎಸ್ ಅಧಿಕಾರಿ ರೂಪಾ ವಿರುದ್ಧ ತನಿಖೆ ಆದೇಶ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು, ಆ.1: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ) ಸ್ವಾಧೀನಪಡಿಸಿಕೊಂಡ ಜಮೀನುಗಳಲ್ಲಿದ್ದ ಕೊಳಗೇರಿ ನಿವಾಸಿಗಳ ಹೆಸರಿನಲ್ಲಿ ಅಕ್ರಮವಾಗಿ ನಿವೇಶಗಳನ್ನು ಹಂಚಿಕೆ ಮಾಡಿರುವ ಆರೋಪದ ಮೇಲೆ ಕೆಎಎಸ್ ಅಧಿಕಾರಿ ರೂಪಾ ವಿರುದ್ಧ ರಾಜ್ಯ ಸರಕಾರ ತನಿಖೆ ನಡೆಸುವಂತೆ ಅನುಮತಿ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಬಿಡಿಎ ಅಕ್ರಮ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, 2022ರ ಎ.21ರಂದು ತಮ್ಮ ವಿರುದ್ಧ ತನಿಖೆಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ರೂಪಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಪೀಠ, ರೂಪಾ ವಿರುದ್ಧದ ತನಿಖೆಯ ಆದೇಶವನ್ನು ರದ್ದುಗೊಳಿಸಿದೆ.
ಬಿಡಿಎ ಅಂಗೀಕರಿಸಿದ ನಿರ್ಣಯ ಹಾಗೂ ಸರಕಾರಿ ಆದೇಶದ ಪ್ರಕಾರವೇ ಕೊಳಗೇರಿ ನಿವಾಸಿಗಳಿಗೆ ನಿವೇಶಗಳನ್ನು ಹಂಚಿಕೆ ಮಾಡಲಾಗಿದೆ ಎಂದು ಹೈಕೋರ್ಟ್ ನ್ಯಾಯಪೀಠವು ಹೇಳಿದೆ.
2021ರ ನವೆಂಬರ್ 19ರಿಂದ 23ರವರೆಗೆ ಬಿಡಿಎ ಕಚೇರಿಗಳಲ್ಲಿ ಶೋಧ ನಡೆಸಿದ್ದ ಎಸಿಬಿ ಅಧಿಕಾರಿಗಳು, ನೂರಾರು ಕಡತಗಳನ್ನು ವಶಪಡಿಸಿಕೊಂಡಿದ್ದರು. ಅವುಗಳ ಪರಿಶೀಲನೆ ನಡೆಸಿದಾಗ ಕೊಳೆಗೇರಿ ನಿವಾಸಿಗಳಿಗೆ ಪರಿಹಾರ ರೂಪದಲ್ಲಿ ನಿವೇಶನ ಹಂಚಿಕೆಯಲ್ಲೂ ಅಕ್ರಮ ನಡೆದಿರುವುದು ಕಂಡುಬಹುದಿತ್ತು. ಈ ಸಂಬಂಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಅನುಮತಿ ಕೋರಿ ಎಸಿಬಿ ರಾಜ್ಯ ಸರಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು.







