ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ಪ್ರವೇಶಾತಿಗೆ ಅನುಮತಿ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಆ.4: ಕಳೆದ ವಾರವಷ್ಟೇ ಹಾವೇರಿ ಮತ್ತು ಯಾದಗಿರಿಯ ನೂತನ ಸರಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶಾತಿ ಆರಂಭಕ್ಕೆ ಅನುಮತಿ ನೀಡಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್‍ಎಂಸಿ) ಇಂದು ಚಿಕ್ಕಮಗಳೂರಿನ ನೂತನ ಸರಕಾರಿ ವೈದ್ಯಕೀಯ ಕಾಲೇಜಿನಲ್ಲಿ 2022-23ನೇ ಶೈಕ್ಷಣಿಕ ಸಾಲಿನಿಂದ 150 ಎಂಬಿಬಿಎಸ್ ಸೀಟುಗಳೊಂದಿಗೆ ಪ್ರವೇಶಾತಿ ಆರಂಭಿಸಲು ಅನುಮತಿ ನೀಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಸಚಿವನಾಗಿ ಪ್ರಮಾಣ ವಚನ ಸ್ವೀಕರಿಸಿ 1 ವರ್ಷ ಪೂರೈಸಿದ ದಿನದಂದೇ ಈ ಸುದ್ದಿ ಬಂದಿರುವುದು ಸಂತಸವಾಗಿದೆ.ವೈದ್ಯಕೀಯ ಶಿಕ್ಷಣ ಸಚಿವನಾಗಿ ಕಳೆದ 3 ವರ್ಷಗಳಲ್ಲಿ ರಾಜ್ಯಕ್ಕೆ 4 ವೈದ್ಯಕೀಯ ಕಾಲೇಜು ಮತ್ತು 700 ಹೆಚ್ಚುವರಿ ಎಂಬಿಬಿಎಸ್ ಸೀಟು ಕಲ್ಪಿಸಿರುವುದು ಹೆಮ್ಮೆ ಹಾಗೂ ತೃಪ್ತಿ ಮೂಡಿಸಿದೆ ಎಂದು ಹೇಳಿದ್ದಾರೆ.
ರಾಜ್ಯದ ವೈದ್ಯಕೀಯ ಶಿಕ್ಷಣ ಕ್ಷೇತ್ರವನ್ನು ಬಲಪಡಿಸುವ ನಿಟ್ಟಿನಲ್ಲಿ ನನ್ನ ಎಲ್ಲ ಪ್ರಯತ್ನಗಳಿಗೆ ಬೆಂಬಲ ನೀಡಿದ ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕರ್ನಾಟಕದ ಸಮಸ್ತ ಜನತೆಯ ಪರವಾಗಿ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಸುಧಾಕರ್ ತಿಳಿಸಿದ್ದಾರೆ.





