ಮಡಿಕೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ

ಮಡಿಕೇರಿ: ಮಳೆಹಾನಿ ಪ್ರದೇಶಗಳ ವೀಕ್ಷಣೆಗೆಂದು ಆಗಮಿಸಿದ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು ವಿಕೃತಿ ಮೆರೆಯಲು ಪೊಲೀಸರ ನಿರ್ಲಕ್ಷ್ಯವೇ ಪ್ರಮುಖ ಕಾರಣ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ಮಡಿಕೇರಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿತು.
ಬಿಜೆಪಿ ಮತ್ತು ಹಿಂದುತ್ವ ಸಂಘಟನೆಗಳ ಕಾರ್ಯಕರ್ತರು ಕಾನೂನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ್ದು ಅಲ್ಲದೆ ವಿರೋಧ ಪಕ್ಷದ ನಾಯಕನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಈ ಘಟನೆ ಪೊಲೀಸರ ಕಣ್ಣೆದುರೇ ನಡೆದಿದ್ದರೂ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲವೆಂದು ಕಾಂಗ್ರೆಸ್ ಪ್ರಮುಖರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದ್ದು, ಮಾಜಿ ಮುಖ್ಯಮಂತ್ರಿಗಳಿಗೇ ರಕ್ಷಣೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಮೊಟ್ಟೆ ಎಸೆದ ಕಿಡಿಗೇಡಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಆ.26ರಂದು ಘಟನೆಯನ್ನು ಖಂಡಿಸಿ “ಕೊಡಗು ಎಸ್‌ಪಿ ಕಚೇರಿ ಚಲೋ” ಹೋರಾಟ ನಡೆಯಲಿದ್ದು, ರಾಜ್ಯ ವ್ಯಾಪಿಯ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯೆ ವೀಣಾ ಅಚ್ಚಯ್ಯ, ಕೆಪಿಸಿಸಿ ವಕ್ತಾರರಾದ ಎ.ಎಸ್.ಪೊನ್ನಣ್ಣ, ಟಿ.ಪಿ.ರಮೇಶ್, ಹೆಚ್.ಎಸ್.ಚಂದ್ರಮೌಳಿ, ಕೆ.ಕೆ.ಮಂಜುನಾಥ್ ಕುಮಾರ್, ಡಾ.ಮಂಥರ್ ಗೌಡ ಹಾಗೂ ಪಕ್ಷದ ಎಲ್ಲಾ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಎಸ್‌ಪಿ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು.






.jpeg)
.jpeg)
.jpeg)
.jpeg)

.jpeg)

