ಸಿದ್ದರಾಮಯ್ಯಗೆ ಜೀವ ಬೆದರಿಕೆ: ಸೂಕ್ತ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ಸಿಎಂ ಬೊಮ್ಮಾಯಿ ಸೂಚನೆ

ಬೆಂಗಳೂರು, ಆ.19: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ಅವರಿಗೆ ಜೀವ ಬೆದರಿಕೆ ಇರುವ ಸಂಬಂಧ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ನೋಡಿದ್ದೇನೆ. ಅಲ್ಲದೆ, ಈ ಸಂಬಂಧ ಅವರೊಂದಿಗೆ ನೇರವಾಗಿ ಮಾತನಾಡಿದ್ದು, ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.
ಶುಕ್ರವಾರ ಆರ್.ಟಿ.ನಗರದಲ್ಲಿರುವ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಚಾರವನ್ನು ಸರಕಾರ ಬಹಳ ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ಮಾಡಿಸುತ್ತೇವೆ. ವಿರೋಧ ಪಕ್ಷದ ನಾಯಕರಿಗೆ ಅಥವಾ ಅವರ ಸಿಬ್ಬಂದಿಗೆ ಯಾರಿಗೆ ಬೆದರಿಕೆ ಕರೆ ಬಂದಿದೆ ಎಂಬುದರ ಕುರಿತು ಮಾಹಿತಿ ಒದಗಿಸುವಂತೆ ಕೋರಲಾಗಿದೆ ಎಂದರು.
ಸಿದ್ದರಾಮಯ್ಯ ಅವರ ಮೇಲೆ ಮಡಿಕೇರಿಯಲ್ಲಿ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ವಿಚಾರದಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕೈ ಮೀರಿ ಹೋಗಬಾರದು. ಎರಡೂ ಕಡೆಯಿಂದ(ಆಡಳಿತ-ಪ್ರತಿಪಕ್ಷ) ನಡೆಯುತ್ತಿದೆ. ಯಾರೂ ಪ್ರಚೋದನಕಾರಿ ಹೇಳಿಕೆ ನೀಡಬಾರದು, ಕಾನೂನು ಸುವ್ಯವಸ್ಥೆಯನ್ನು ಕೈಗೆತ್ತಿಕೊಳ್ಳಬಾರದು. ಈ ಸಂಬಂಧ ಎಲ್ಲ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಇದನ್ನೂ ಓದಿ... ಹಿಂದುತ್ವ ಸಂಘಟನೆಗಳಿಂದ ತಂದೆಗೆ ಜೀವ ಬೆದರಿಕೆ ಇದೆ: ಶಾಸಕ ಯತೀಂದ್ರ ಸಿದ್ದರಾಮಯ್ಯ







